×
Ad

ರೈತರ ಆದಾಯ ದ್ವಿಗುಣಗೊಳಿಸಲು ಪೂರಕ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ

Update: 2021-01-02 13:33 IST

ಬೆಂಗಳೂರು, ಜ.2-: ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಅವರು ಇಂದು ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾನಿಲಯವು ಶನಿವಾರ ಹಮ್ಮಿಕೊಂಡಿರುವ ತೋಟಗಾರಿಕಾ ಮೇಳವನ್ನು ಆನ್ ಲೈನ್ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಿಎಫ್ ಟಿ ಆರ್ ಐ ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್ ಗಳ ಬಗ್ಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ. ಒಟ್ಟಾರೆ ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಪ್ರಧಾನ ಮಂತ್ರಿಯವರು 100ನೇ ಕಿಸಾನ್ ರೈಲಿಗೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ ಮೂಲಕ 27 ಸಾವಿರ ಟನ್ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ಶೀಘ್ರವಾಗಿ ಕೊಳೆತು ಹೋಗಬಹುದಾದ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಕೃಷಿ ರೈಲ್ ಯೋಜನೆಯ ಸೌಲಭ್ಯವನ್ನು ಬಳಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಮಾತನಾಡಿ, ತೋಟಗಾರಿಕಾ ಪ್ರದೇಶ ವಿಸ್ತರಣೆಯಾಗುತ್ತಿರುವುದು ರೈತರಿಗೆ ತೋಟಗಾರಿಕೆ ಲಾಭದಾಯಕ ಎಂಬುದಕ್ಕೆ ನಿದರ್ಶನ. ವಿಜ್ಞಾನಿಗಳು ರೈತರಿಗೆ ಇನ್ನೂ ಹೆಚ್ಚು ಹೆಚ್ಚು ಲಾಭ ತರುವ ತಳಿಗಳನ್ನು ಸಂಶೋಧಿಸಿ, ರೈತರ ಬದುಕು ಹಸನುಗೊಳಿಸಬೇಕು ಎಂದು ಸಲಹೆ ನೀಡಿದರು.

ತೋಟಗಾರಿಕಾ ಸಚಿವ ನಾರಾಯಣಗೌಡ ಮಾತನಾಡಿ, ರಾಜ್ಯದಲ್ಲಿ ತೋಟಗಾರಿಕೆ ಉತ್ತೇಜನಕ್ಕೆ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ತೋಟಗಾರಿಕೆ ಉತ್ಪನ್ನಗಳ ರಫ್ತು ಪ್ರಮಾಣ ಶೇ. 2.5ರಿಂದ ಶೇ. 5ಕ್ಕೇರಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಿಸಲು ರೈತರಿಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು.

ಬಾಗಲಕೋಟೆ ಶಾಸಕ ವೀರಣ್ಣ ಚರಂತಿ ಮಠ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್. ಆರ್. ಪಾಟೀಲ, ತೋಟಗಾರಿಕಾ ವಿವಿಯ ಕುಲಪತಿ ಡಾ. ಇಂದ್ರೇಶ್ ಮತ್ತು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News