ಸಂಪುಟ ವಿಸ್ತರಣೆ ಸಂಬಂಧ ಅರುಣ್ ಸಿಂಗ್ ಜತೆ ಸಿಎಂ ಯಡಿಯೂರಪ್ಪ ಸಮಾಲೋಚನೆ
ಬೆಂಗಳೂರು, ಜ. 2: ಸಚಿವ ಸ್ಥಾನದ ಆಕಾಂಕ್ಷಿಗಳ ಒತ್ತಡದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಗೆ ತ್ವರಿತಗತಿಯಲ್ಲಿ ಅನುಮೋದನೆ ನೀಡಬೇಕು ಎಂದು ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಖುದ್ದು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಶನಿವಾರ ಇಲ್ಲಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಮಾಡಿ ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸಿದರು. ಅಲ್ಲದೆ, ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು.
ಜತೆಗೆ ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿಯೂ ಬಿಜೆಪಿ ಪಕ್ಷದ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ. ಅಲ್ಲದೆ, ಬೆಳಗಾವಿ, ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನ ನಿಟ್ಟಿನಲ್ಲಿ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆಂದು ಗೊತ್ತಾಗಿದೆ.
ಯತ್ನಾಳ್ ಹೇಳಿಕೆ ಪ್ರಸ್ತಾಪ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಕೆಲ ಮುಖಂಡರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಈ ವಿಚಾರವನ್ನು ಅರುಣ್ ಸಿಂಗ್ ಅವರ ಗಮನಕ್ಕೆ ತರಲಾಗಿದೆ. ಈ ಸಂಬಂಧ ಕೋರ್ ಕಮಿಟಿ ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡಬೇಕು ಎಂದು ಕೋರಲಾಗಿದೆ ಎಂದು ತಿಳಿದು ಬಂದಿದೆ.
ಅರುಣ್ ಸಿಂಗ್ ಭೇಟಿಗೂ ಮೊದಲು ಮಾತನಾಡಿದ ಯಡಿಯೂರಪ್ಪ, ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಸ್ಪಷ್ಟನೆ ನೀಡಿದರು.
ಶಿವಮೊಗ್ಗದಲ್ಲಿ ಪಕ್ಷದ ಪ್ರಮುಖರ ಕೋರ್ ಕಮಿಟಿ ಸಭೆ ಜೊತೆ ಕಾರ್ಯಕಾರಿಣಿ ಸಭೆಯೂ ನಡೆಯಲಿದೆ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸುವುದು. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ನಗರಕ್ಕೆ ಆಗಮಿಸಿದ್ದು, ಶಿವಮೊಗ್ಗದಲ್ಲಿ ನಡೆಯಲಿರುವ ಕೋರ್ ಕಮಿಟಿ ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಜರಿದ್ದರು.