×
Ad

ಜ.4ರಂದು ಬಿಜೆಪಿ ಶಾಸಕರೊಂದಿಗೆ ಮುಖ್ಯಮಂತ್ರಿ ಸಭೆ

Update: 2021-01-03 20:32 IST

ಬೆಂಗಳೂರು, ಜ.3: ನಿಗಮ, ಮಂಡಳಿಗಳ ನೇಮಕಾತಿಯಲ್ಲಿನ ಅಸಮಾಧಾನ, ಸಚಿವ ಸಂಪುಟ ವಿಸ್ತರಣೆಯಲ್ಲಿ ಆಗುತ್ತಿರುವ ವಿಳಂಬ ಹಾಗೂ ಪದೇ ಪದೇ ರಾಜ್ಯದಲ್ಲಿ ನಾಯಕತ್ವದ ವಿಚಾರ ಚರ್ಚೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ(ಜ.4) ನಗರದ ಖಾಸಗಿ ಹೊಟೇಲ್‍ನಲ್ಲಿ ಶಾಸಕರೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದಾರೆ.

ನಿಗಮ, ಮಂಡಳಿಗಳಿಗೆ ನೇಮಕ ಮಾಡುವಾಗ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ಆರೋಪ ಶಾಸಕರ ವಲಯದಿಂದ ಕೇಳಿ ಬಂದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಕೆಲವು ನಿಗಮ, ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರ ನೇಮಕಾತಿಯನ್ನು ಬದಲಾವಣೆ ಮಾಡಿ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದರು.

ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲು ಮಾಜಿ ಸಚಿವ ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂ.ಪಿ.ರೇಣುಕಾಚಾರ್ಯ, ಎಚ್.ವಿಶ್ವನಾಥ್, ಆರ್.ಶಂಕರ್, ಎಂ.ಟಿ.ಬಿ.ನಾಗರಾಜ್, ಯೋಗೇಶ್ವರ್ ಸೇರಿದಂತೆ ಹಲವರು ಉತ್ಸುಕರಾಗಿದ್ದು, ತಮ್ಮದೇ ಆದ ರೀತಿಯಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸಭಾ ಚುನಾವಣೆಯಲ್ಲಿ ಫರಾಭವಗೊಂಡಿರುವ ಸಿ.ಪಿ.ಯೋಗೇಶ್ವರ್‍ಗೆ ವಿಧಾನಪರಿಷತ್ತಿನ ಸದಸ್ಯತ್ವ ನೀಡಲಾಗಿದೆ. ಜೊತೆಗೆ ಸಚಿವ ಸ್ಥಾನ ನೀಡಲು ಮುಂದಾಗುತ್ತಿರುವ ಮುಖ್ಯಮಂತ್ರಿಯ ಕ್ರಮದ ವಿರುದ್ಧ ಹಲವು ಹಿರಿಯ ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಉಪ ಚುನಾವಣೆಯಲ್ಲಿ ಸೋತರು ವಿಧಾನಪರಿಷತ್ತಿನ ಸದಸ್ಯತ್ವ ಪಡೆಯುವಲ್ಲಿ ಯಶಸ್ವಿಯಾಗಿರುವ ಎಚ್.ವಿಶ್ವನಾಥ್ ಪಾಲಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವು ಹಿನ್ನಡೆಯುಂಟು ಮಾಡಿದಂತಾಗಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪದೇ ಪದೇ ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಕುರಿತು ನೀಡುತ್ತಿರುವ ಹೇಳಿಕೆಗಳು ಹಾಗೂ ಬಿಜೆಪಿ ಹೈಕಮಾಂಡ್ ಈ ವಿಚಾರವಾಗಿ ಮೌನಕ್ಕೆ ಶರಣಾಗಿರುವುದು ಕುತೂಹಲಕ್ಕೆ ಎಡೆ ಮಾಡಿಕೊಡುತ್ತಿದೆ. ಜ.15 ಮತ್ತು 16ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅವರು ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ಯಶಸ್ಸಿಗೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News