×
Ad

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

Update: 2021-01-03 21:51 IST

ಉಡುಪಿ, ಜ.3: ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿ ಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ನಗರದ ಮಿಶನ್ ಕಂಪೌಂಡ್ ಸಮೀಪದ ವಿಶ್ವಾಸ್ ಟ್ರೇಡ್ ಅಪಾರ್ಟ್‌ಮೆಂಟ್ ನಿವಾಸಿ ಶ್ರೀನಿವಾಸ ಆಚಾರ್ಯ ಎಂಬವರ ಮಗ ಶ್ರೀವಾತ್ಸವ(20) ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಖಾಸಗಿ ಪದವಿ ಕಾಲೇಜಿನಲ್ಲಿ ಪ್ರಥಮ ಬಿಎ ಸೆಮಿಸ್ಟಾರ್ ಮಾಡಿ ಬಳಿಕ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದರು.

ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ಚಿಂತೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಶ್ರೀವಾತ್ಸವ ಜ.2ರಂದು ರಾತ್ರಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಸುಟ್ಟ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಕೂಡಲೇ ಮಣಿ ಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿ ಯಾಗದೆ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News