2023ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಜೆಡಿಎಸ್ ಅಧಿಕಾರಕ್ಕೆ: ಮಾಜಿ ಸಿಎಂ ಕುಮಾರಸ್ವಾಮಿ

Update: 2021-01-04 11:32 GMT

ಬೆಂಗಳೂರು, ಜ. 4: 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಜಾತ್ಯತೀತ ಜನತಾ ದಳ(ಜೆಡಿಎಸ್) ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಇಲ್ಲದೆ ಸ್ವತಂತ್ರವಾಗಿ ಚುನಾವಣೆ ಎದುರಿಸಲಿದ್ದು, ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ಸೋಮವಾರ ಇಲ್ಲಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಯುವ ಘಟಕ ಹಾಗೂ ವಿದ್ಯಾರ್ಥಿ ಜನತಾ ದಳದ ಪದಾಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಅವರು, ಮುಂಬರುವ ಯಾವುದೇ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಏನೆಂಬುದು ನಮಗೆ ಗೊತ್ತಿದೆ. ಈ ಎರಡೂ ಪಕ್ಷಗಳು ಜೆಡಿಎಸ್ ಅಸ್ತಿತ್ವವೇ ಮುಗಿದು ಹೋಯ್ತು ಎಂದು ಅಪಪ್ರಚಾರ ಮಾಡುತ್ತಿವೆ. ಯಾರೂ ನಮ್ಮನ್ನು ಮುಗಿಸಲು ಸಾಧ್ಯವಿಲ್ಲ ಎಂದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಜೆಡಿಎಸ್ ಪ್ರಧಾನಿ, ಮುಖ್ಯಮಂತ್ರಿಯಾಗಲು ನಾವೇನು ಅರ್ಜಿ ಹಾಕಿರಲಿಲ್ಲ ಎಂದು ತಿರುಗೇಟು ನೀಡಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅವರ ಬಳಿ ತಮ್ಮನ್ನು ಪ್ರಧಾನಿ ಮಾಡಿ ಎಂದು ಕಾಂಗ್ರೆಸ್ ಪಕ್ಷದ ಮನೆಬಾಗಿಲಿಗೆ ಹೋಗಿರಲಿಲ್ಲ. ನಾವು ಎಂದೂ ಅವರ ಬಳಿಗೆ ಹೋಗಿರಲಿಲ್ಲ. ಅವರಾಗಿಯೇ ನಮ್ಮ ಬಳಿ ಬಂದು ಪ್ರಧಾನಿ ಮತ್ತು ಸಿಎಂ ಆಗಲು ಬೆಂಬಲ ನೀಡಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಮೂಲ ಕಾಂಗ್ರೆಸ್ ಬಗ್ಗೆ ನಾನು ಮಾತನಾಡಿಲ್ಲ. ಆ ಕಾಂಗ್ರೆಸ್‍ನ ಹೋರಾಟದ ಬಗ್ಗೆ ಗೌರವವಿದೆ. ಈಗಿರುವ ಕಾಂಗ್ರೆಸ್ ಬಗ್ಗೆ ನಾನು ಟೀಕಿಸಿದ್ದೇನೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರಿಂದ ನಾನೇನು ಮುಖ್ಯಮಂತ್ರಿ ಆಗಿಲ್ಲ ಎಂದು ಟೀಕಿಸಿದರು.

ಬಿಜೆಪಿಯವರು ಗ್ರಾ.ಪಂ.ಚುನಾವಣೆಗೂ ಮುನ್ನ 'ಗ್ರಾಮ ಸ್ವರಾಜ್ಯ' ಮಾಡಿದ್ದರು. ಹಣ ಬಲದಿಂದಲೇ ಚುನಾವಣೆ ಮಾಡಿದ್ದಾರೆಂದು ಆರೋಪಿಸಿದ ಅವರು, ಈ ಬಗ್ಗೆ ಅವರದೇ ಪಕ್ಷದ ಶಾಸಕರು ಅಸಮಾಧಾನಗೊಂಡಿದ್ದಾರೆ. ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‍ರನ್ನು ನಾನು ಎಂದೂ ಭೇಟಿ ಮಾಡಿಲ್ಲ. ಶಾಸಕರ ಪರವಾಗಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಜ.14ರಸಂಕ್ರಾಂತಿ ಹಬ್ಬದ ಬಳಿಕ ಜೆಡಿಎಸ್‍ನಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಬೇಕಿದೆ. ತಳ ಮಟ್ಟದಿಂದ ಜೆಡಿಎಸ್ ಪಕ್ಷವನ್ನು ಸಂಘಟನೆ ಮಾಡಬೇಕಿದೆ. ಅದಕ್ಕಾಗಿ ಯುವ ಮುಖಂಡರ ಸಭೆಯನ್ನು ನಡೆಸಿದ್ದು, ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದರು.

ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಸೇರಿದಂತೆ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News