ಶಾಸಕ ಯತ್ನಾಳ್ ಹೇಳಿಕೆ, ಸುನೀಲ್ ಕುಮಾರ್ ಪತ್ರದ ಬಗ್ಗೆ ನಳಿನ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ...

Update: 2021-01-04 12:14 GMT

ಬೆಂಗಳೂರು, ಜ. 4: ವಿಜಯಪುರ ನಗರ ಕ್ಷೇತ್ರದ ಶಾಸಕ ಹಾಗೂ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಶಿಸ್ತು ಸಮಿತಿಗೆ ಮಾಹಿತಿ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷದ 'ಬಿ' ಫಾರ್ಮ್ ಪಡೆದು ಆಯ್ಕೆಯಾದವರು ಕೇಂದ್ರ ಶಿಸ್ತು ಸಮಿತಿಗೆ ಒಳಪಡಲಿದ್ದಾರೆ. ಹೀಗಾಗಿ ಕೇಂದ್ರ ಶಿಸ್ತು ಸಮಿತಿಗೆ ಈ ವಿಚಾರಕ್ಕೆ ಸಂಬಂಧ ಮಾಹಿತಿ ರವಾನಿಸಲಾಗಿದೆ ಎಂದು ತಿಳಿಸಿದರು.

ಶಾಸಕಾಂಗ ಪಕ್ಷದ ಸಭೆ ಕರೆಯಲು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿರುವುದಲ್ಲಿ ಯಾವುದೇ ತಪ್ಪಿಲ್ಲ. ಅದೇ ರೀತಿಯಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್ ಪತ್ರ ಬರೆದಿರುವುದರಲ್ಲಿಯೂ ತಪ್ಪಿಲ್ಲ. ಅವುಗಳು ಸರಿಯಾಗಿಯೇ ಇವೆ ಎಂದು ಕಟೀಲ್ ಸಮರ್ಥನೆ ಮಾಡಿದರು.

ನಾಯಕತ್ವ ಬದಲಾವಣೆ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೇಂದ್ರ ಶಿಸ್ತು ಸಮಿತಿ ಕ್ರಮ ಕೈಗೊಳ್ಳಲಿದೆ ಎಂದ ಅವರು, ಯತ್ನಾಳ್ ವಿರುದ್ಧ ಕ್ರಮಕ್ಕೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೂಚನೆ ನೀಡಿದ್ದಾರೆಂಬುದು ಮಾಧ್ಯಮಗಳ ಸೃಷ್ಟಿ ಎಂದು ಹೇಳಿದರು.

ಶಾಸಕರ ಬೇಡಿಕೆ ಹಿನ್ನೆಲೆಯಲ್ಲೇ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ರಾಜ್ಯ ಸರಕಾರದ ಯೋಜನೆಗಳು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ಉಲ್ಲೇಖ ಮಾಡಿದ್ದಾರೆ. ಶಾಸಕರ ಬೇಡಿಕೆಗಳನ್ನು ಆಲಿಸಿ ಮುಖ್ಯಮಂತ್ರಿ ಅವರಿಗೆ ಸ್ಪಂದಿಸಲಿದ್ದಾರೆ. ಸಚಿವರು ಹಸ್ತಕ್ಷೇಪದ ಬಗ್ಗೆ ಶಾಸಕರೂ ಎಲ್ಲೂ ಆರೋಪ ಮಾಡಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News