ಶಾಲಾ-ಕಾಲೇಜುಗಳಲ್ಲಿ ಉತ್ತಮ ಹಾಜರಾತಿ: ಸಚಿವ ಸುರೇಶ್ ಕುಮಾರ್

Update: 2021-01-04 16:08 GMT

ಬೆಂಗಳೂರು, ಜ.4: ರಾಜ್ಯದಲ್ಲಿರುವ 5492 ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗಿರುವ 3,62,704 ವಿದ್ಯಾರ್ಥಿಗಳ ಪೈಕಿ ಸೋಮವಾರ 1,99,553 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.(ಶೇ.55.018 ಹಾಜರಿ), ಅಂತೆಯೇ 16,850 ಪ್ರೌಢಶಾಲೆಗಳಲ್ಲಿ 10ನೆ ತರಗತಿಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,81,728 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. (ಶೇ.51.95 ಹಾಜರಾತಿ) ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

6 ರಿಂದ 9ನೆ ತರಗತಿಗಳಿಗೆ ನಡೆಯುತ್ತಿರುವ ಪರಿಷ್ಕೃತ ವಿದ್ಯಾಗಮ ತರಗತಿಗಳಿಗೆ ಸೋಮವಾರ 4,71,823 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಪ್ರಸ್ತುತ ವರ್ಷದ ಶಾಲಾರಂಭದ ನಾಲ್ಕನೆ ದಿನವಾದ ಸೋಮವಾರ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವುದು ಶಾಲಾ ಕಾಲೇಜುಗಳನ್ನು ಆರಂಭಿಸಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದಂತಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಿಕ್ಕ ಕುರುವತ್ತಿ ಸರಕಾರಿ ಪ್ರೌಢಶಾಲೆ ಮತ್ತು ಒಂದು ಖಾಸಗಿ ಶಾಲೆಯ ಒಬ್ಬೊಬ್ಬ ಶಿಕ್ಷಕರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆಯ ಒಬ್ಬ ಶಿಕ್ಷಕರು ಮತ್ತು ಕಳಸಾ ತಾಲೂಕಿನ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಕೊರೋನ ಸೋಂಕು ದೃಢಪಟ್ಟಿದ್ದು ಈ ಶಾಲೆಗಳನ್ನು ಮುಂದಿನ ಸೋಮವಾರ ಆರಂಭಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿದ್ಯಾಗಮ ತರಗತಿಗಳೂ ಸುರಕ್ಷಿತ ವಾತಾವರಣದಲ್ಲಿ ನಡೆಯುತ್ತಿದ್ದು, ಸುರಕ್ಷಿತ ಅಂತರ ಕಾಪಾಡಿಕೊಳ್ಳುವ ಮೂಲಕ ಹೆಚ್ಚಿನ ಮಕ್ಕಳು ಹಾಜರಾಗುತ್ತಿದ್ದಾರೆ. ಪೋಷಕರು ಮತ್ತು ಮಕ್ಕಳು ಶಾಲಾರಂಭದ ಕುರಿತು ಸಂತಸ ವ್ಯಕ್ತಪಡಿಸಿದ್ದಾರಲ್ಲದೇ, ಸುರಕ್ಷತೆ ಮತ್ತು ಎಸ್‍ಒಪಿ ಪಾಲನೆ ಕುರಿತು ವಿಶ್ವಾಸ ಹೊಂದಿದ್ದಾರೆ. ಬಹುದಿನಗಳ ಕಾಲ ಶಾಲೆಗಳು ಆರಂಭವಾಗದೆ ಮಕ್ಕಳ ಭವಿಷ್ಯದ ಕುರಿತು ಆತಂಕದಲ್ಲಿದ್ದ ಪೋಷಕರು ಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದೆಲ್ಲೆಡೆ ಶಾಲಾರಂಭಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News