ಕೇಂದ್ರ ಸಚಿವ ಸದಾನಂದಗೌಡ ಆಸ್ಪತ್ರೆಯಿಂದ ಬಿಡುಗಡೆ

Update: 2021-01-05 12:57 GMT

ಬೆಂಗಳೂರು, ಜ.5: ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾದ ಹಿನ್ನೆಲೆಯಲ್ಲಿ ಅಸ್ವಸ್ಥರಾಗಿ ಜ.3ರಂದು ನಗರದ ಹೆಬ್ಬಾಳದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ, ಮಂಗಳವಾರ ಸಂಜೆ ಆಸ್ಪತ್ರೆಯಿಂದ ಮನೆಗೆ ಹಿಂದಿರುಗಿದರು.

ಕಳೆದ ಎರಡು ದಿನಗಳಿಂದ ಆ್ಯಸ್ಟರ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸದಾನಂದಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ. ಇನ್ನು ಕೆಲವು ದಿನಗಳ ವೈದ್ಯರ ಸಲಹೆಯಂತೆ ಮನೆಯಲ್ಲೆ ಸದಾನಂದಗೌಡ ವಿಶ್ರಾಂತಿ ಪಡೆಯಲಿದ್ದಾರೆ.

ಶಿವಮೊಗ್ಗದಲ್ಲಿ ಜನವರಿ 2 ಹಾಗೂ 3ರಂದು ಆಯೋಜಿಸಲಾಗಿದ್ದ ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಪಾಲ್ಗೊಂಡು ರವಿವಾರ ಬೆಂಗಳೂರಿಗೆ ಹಿಂದಿರುಗುವಾಗ ಮಾರ್ಗಮಧ್ಯೆ ಚಿತ್ರದುರ್ಗದಲ್ಲಿ ಮಧ್ಯಾಹ್ನ ಭೋಜನಕ್ಕೆ ತೆರಳುವ ಸಂದರ್ಭದಲ್ಲಿ ಸದಾನಂದಗೌಡ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಕೂಡಲೆ ಅವರನ್ನು ಝಿರೋ ಟ್ರಾಫಿಕ್‍ನಲ್ಲಿ ಆಂಬ್ಯುಲೆನ್ಸ್ ಮೂಲಕ ಆ್ಯಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಚಿವ ಸಂಪುಟ ಸದಸ್ಯರು, ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಸದಾನಂದಗೌಡರ ಆರೋಗ್ಯ ವಿಚಾರಿಸಿದ್ದರು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಸಂಪರ್ಕಿಸಿ ಆರೋಗ್ಯ ಸುಧಾರಿಸಲು ವಿಶ್ರಾಂತಿಯಲ್ಲಿರುವಂತೆ ಸಲಹೆ ನೀಡಿದ್ದರು.

ಆರಾಮಾಗಿ ನಾನೀಗ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದೇನೆ. ಒಂದೆರಡು ದಿನ ಮನೆಯಲ್ಲಿ ವಿಶ್ರಾಂತಿ ಪಡೆದು ಬಜೆಟ್ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕಿದೆ. ಉತ್ತಮ ಸೇವೆ ಒದಗಿಸಿದ ವೈದ್ಯರು ಮತ್ತಿತರ ಆರೋಗ್ಯ ಸಿಬ್ಬಂದಿ ಹಾಗೂ ನನ್ನ ಆರೋಗ್ಯಕ್ಕಾಗಿ ಹಾರೈಸಿದ ಸ್ನೇಹಿತರೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News