ಮುಂದಿನ ನಾಲ್ಕು ದಿನ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Update: 2021-01-06 17:56 GMT

ಬೆಂಗಳೂರು, ಜ.6: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಂದು ತುಂತುರು ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಇದರ ಜೊತೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಕೂಡ ತುಂತುರು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜತೆಗೆ ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ.  

ಕರಾವಳಿ ಜಿಲ್ಲೆಗಳಲ್ಲಿ ಜ.10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಬೆಂಗಳೂರಿನಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಹನುಮಂತನಗರ, ಬಸವನಗುಡಿ, ಜಯನಗರ, ಕಾರ್ಪೋರೇಷನ್ ವೃತ್ತ, ಕೆ.ಆರ್.ಮಾರ್ಕೆಟ್, ಡಾಲರ್ಸ್ ಕಾಲನಿ, ಮಲ್ಲೇಶ್ವರಂ, ಬನಶಂಕರಿ, ಹೆಬ್ಬಾಳ, ಆರ್.ಟಿ. ನಗರ, ರೇಸ್ ಕೋರ್ಸ್ ರಸ್ತೆ ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ಜ.6ರಂದು ಮತ್ತೆ ಮಳೆ ಆರಂಭವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಈಶಾನ್ಯ ಮುಂಗಾರಿನ ಮಾರುತಗಳು ಪ್ರಬಲವಾಗಿರುವುದರಿಂದ ಮೋಡ ಕವಿದ ವಾತಾವರಣವಿದ್ದು, ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಶಾನ್ಯದ ಕಡೆಯಿಂದ ಬಲವಾದ ಮೇಲ್ಮೈ ಗಾಳಿ ಬೀಸುತ್ತಿದ್ದು, ಜ.8ರವರೆಗೂ ಇದೇ ರೀತಿ ಮೋಡ ಕವಿದ ವಾತಾವರಣ ಕಂಡು ಬರಲಿದೆ.

3 ದಿನಗಳ ಹಿಂದೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರಿನಲ್ಲಿ ಮಳೆಯಾಗಿತ್ತು. ಮುಂದಿನ ಮೂರು ದಿನ ಮಳೆಯ ವಾತಾವರಣ ಮುಂದುವರಿಯಲಿದ್ದು, ಮಲೆನಾಡು, ಕೊಡಗು, ಹಾಸನದಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ 3 ದಿನಗಳ ಹಿಂದೆ ಭಾರೀ ಮಳೆಯಾಗಿ, ಅವಾಂತರಗಳನ್ನು ಸೃಷ್ಟಿಸಿತ್ತು. ಇದೀಗ ಮತ್ತೆ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News