ಮಹಿಳೆಯ ಅತ್ಯಾಚಾರವೆಸಗಿ, ಕೊಲೆ ಪ್ರಕರಣ: ಗೋವಾದಲ್ಲಿ ಆರೋಪಿ ಸೆರೆ

Update: 2021-01-06 18:14 GMT

ಬೆಂಗಳೂರು, ಜ.6: ಕಾಮಾಕ್ಷಿಪಾಳ್ಯದ ಮನೆಯೊಂದರಲ್ಲಿ ಪರಿಚಯಸ್ಥ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿ ಗೋವಾದಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ವರದಿಯಾಗಿದೆ.

ಕಾಮಾಕ್ಷಿಪಾಳ್ಯದ ನಿವಾಸಿ ಪ್ರವೀಣ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಿಂಟಿಂಗ್ ಪ್ರೆಸ್‍ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯು ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಆ ಬಗ್ಗೆ ಅವರ ಪತಿ ಮಾಗಡಿ ರಸ್ತೆ ಠಾಣೆಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಮಂಗಳವಾರ ಕಾಮಾಕ್ಷಿ ಪಾಳ್ಯದ ಆರೋಪಿ ಪ್ರವೀಣ್ ಮನೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.

ಕೃತ್ಯವೆಸಗಿದ್ದ ಪ್ರವೀಣ್ ಗೋವಾಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ಅಲ್ಲಿನ ಪೊಲೀಸರ ನೆರವಿನೊಂದಿಗೆ ಬಂಧಿಸಿ ನಗರಕ್ಕೆ ಕರೆತಂದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News