ಬಿಬಿಎಂಪಿ ವಾರ್ಡ್ ಗಳ ಸಂಖ್ಯೆ 243ಕ್ಕೆ ಹೆಚ್ಚಳ ಮಸೂದೆಗೆ ರಾಜ್ಯಪಾಲರ ಅಂಕಿತ

Update: 2021-01-08 12:53 GMT

ಬೆಂಗಳೂರು, ಜ. 8: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಮತ್ತು ಪಾಲಿಕೆಯ ವಾರ್ಡ್ ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಳಕ್ಕೆ ಸಂಬಂಧಿಸಿದ ಮಹತ್ವದ ಮಸೂದೆಗೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಶುಕ್ರವಾರ ಅಂಕಿತ ಹಾಕಿದ್ದಾರೆ.

ವಿಧಾನಸಭೆ ಮತ್ತು ವಿಧಾನಪರಿಷತ್ತಿನ ಎರಡು ಅಧಿವೇಶನದಲ್ಲಿ ಸುದೀರ್ಘವಾಗಿ ಚರ್ಚೆಯಾಗಿ ಜಂಟಿ ಪರಿಶೀಲನಾ ಸಮಿತಿಯ ಪರಿಶೀಲನೆಗೆ ಒಳಪಟ್ಟು ಅಂತಿಮವಾಗಿ ಉಭಯ ಸದನಗಳಲ್ಲಿ ವಿಪಕ್ಷಗಳ ವಿರೋಧದ ಮಧ್ಯೆ ಅಂಗೀಕಾರಗೊಂಡಿರುವ 'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿನಿಯಮ 2020'ಕ್ಕೆ ರಾಜ್ಯಪಾಲರಾದ ವಜುಭಾಯಿ ವಾಲಾ ಸಹಿ ಹಾಕಿದ್ದು, ಶೀಘ್ರದಲ್ಲೆ ಅಧಿಕೃತವಾಗಿ ಜಾರಿಗೆ ಬರಲಿದೆ.

ನೂತನ ಕಾಯ್ದೆ ಬೆಂಗಳೂರು ನಗರದ ಭವಿಷ್ಯದ ದೃಷ್ಟಿಯಿಂದ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬಿಬಿಎಂಪಿ ಆಡಳಿತ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲಿದೆ ಎಂದು ಸರಕಾರ ಹೇಳಿದ್ದು, ಬಿಬಿಎಂಪಿಗೆ ಇನ್ನುಮುಂದೆ 8 ವಲಯಗಳಿಗೂ ಪ್ರತ್ಯೇಕ ಆಯುಕ್ತರನ್ನು ನೇಮಿಸಲು ಈ ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಈಗಿರುವ ಆಯುಕ್ತರು ಇನ್ನು ಮುಂದೆ ಮುಖ್ಯ ಆಯುಕ್ತರಾಗಿ ಕೆಲಸ ಮಾಡಲಿದ್ದಾರೆ. ವಾರ್ಡ್ ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಲು ನಿರ್ಧರಿಸಿದ್ದು, ಆಡಳಿತಾತ್ಮಕವಾಗಿ ಹಲವು ಮಹತ್ವದ ಬದಲಾವಣೆಗಳನ್ನು ಅಳವಡಿಸಲಾಗುತ್ತಿದ್ದು, ಇನ್ನು ಮುಂದೆ ಬೆಂಗಳೂರಿನ ಸಮಗ್ರ ಅಭಿವೃದ್ಧಿಯಾಗಲಿದೆ ಎಂಬ ನಿರೀಕ್ಷೆ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News