ಹಕ್ಕಿ ಜ್ವರ; ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ, ಜ.8: ಜಿಲ್ಲೆಯಲ್ಲಿ ಇದುವರೆಗೆ ಕೋಳಿಯೂ ಸೇರಿದಂತೆ ಯಾವುದೇ ಪಕ್ಷಿಗಳಲ್ಲಿ ಹಕ್ಕಿಜ್ವರದ ಸೋಂಕು ಕಂಡು ಬಂದಿಲ್ಲ. ಈ ಬಗ್ಗೆ ಜಿಲ್ಲೆ ಯಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ. ಹೀಗಾಗಿ ಸಾರ್ವಜನಿಕರು ಹಕ್ಕಿಜ್ವರದ ಕುರಿತು ಯಾವುದೇ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಆದರೆ ಹಕ್ಕಿ ಜ್ವರ ಹರಡದಂತೆ ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.
ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಕ್ಕಿ ಜ್ವರದ ಕುರಿತು ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು.
ಹಕ್ಕಿ ಜ್ವರವು ಈಗಾಗಲೇ ಕೇರಳ, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಕಂಡುಬಂದಿರುವ ವರದಿಯ ಹಿನ್ನಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಬೇಕು. ಪಶುಪಾಲನೆ ಸಂಗೋಪನಾ ಇಲಾಖೆ, ಅರಣ್ಯ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಕೋಳಿ ಫಾರಂಗಳಿಗೆ ಭೇಟಿ ನೀಡಿ ಕೋಳಿಗಳ ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಡಿಸಿ ಸೂಚಿಸಿದರು.
ಒಂದು ವೇಳೆ ಹಕ್ಕಿ ಜ್ವರ ಕಾಣಿಸಿಕೊಂಡರೆ ಇದು ಮನುಷ್ಯರಿಗೆ ವರ್ಗಾವಣೆ ಯಾಗದಂತೆ ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕೋಳಿ ಫಾರಂ ಹಾಗೂ ಮಾಂಸ ಮಾರಾಟ ಅಂಗಡಿಗಳವರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸ ಬೇಕು. ವೈರಾಣು ಎಂಜಲು ಹನಿಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವುದರಿಂದ ಇದಕ್ಕೆ ಕಡಿವಾಣ ಹಾಕಬೇಕು ಎಂದರು.
ಅಂತರ ಜಿಲ್ಲಾ ನಿರ್ಬಂಧವಿಲ್ಲ: ಸಾರ್ವಜನಿಕರು ಹಕ್ಕಿಜ್ವರ ಕುರಿತು ಸೋಷಿಯಲ್ ಮೀಡಿಯಾಗಳಲ್ಲಿ ಬರುವ ಸುದ್ದಿಗಳನ್ನು ನಂಬದಂತೆ ತಿಳಿಸಿದ ಜಿಲ್ಲಾಧಿಕಾರಿ, ಜಿಲ್ಲೆಗೆ ಹೊರರಾಜ್ಯಗಳಿಂದ ಕೋಳಿಗಳನ್ನು ತರಿಸುವುದಿಲ್ಲ. ಜಿಲ್ಲೆಗೆ ಈಗ ಬರುತ್ತಿರುವುದು ದಾವಣಗೆರೆ ಹಾಗೂ ಮೈಸೂರು ಜಿಲ್ಲೆಗಳ ಕೋಳಿಗಳು. ಈಗ ಅಂತರ ಜಿಲ್ಲಾ ಕೋಳಿ ಸಾಗಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ಆದ್ದರಿಂದ ಕೋಳಿಮಾಂಸ ಸೇವನೆಗೆ ಯಾವುದೇ ಸಮಸ್ಯೆಯಿಲ್ಲ ಎಂದವರು ಸ್ಪಷ್ಟ ಪಡಿಸಿದರು.
ಜಿಲ್ಲೆಯಿಂದ ಬೇರೆ ರಾಜ್ಯಗಳಿಗೆ ಕೋಳಿಗಳನ್ನು ಸರಬರಾಜು ಮಾಡಿ ಬರುವ, ಖಾಲಿ ವಾಹನಗಳನ್ನು ಸ್ಯಾನಟೈಸ್ ಮಾಡಿ, ಚಾಲಕ-ಸಿಬ್ಬಂದಿಗಳ ಆರೋಗ್ಯ ತಪಾಸಣೆ ಮಾಡಬೇಕು. ಮನೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಅನುಮಾನಾ ಸ್ಪದವಾಗಿ ಸತ್ತ ಪಕ್ಷಿ, ಪ್ರಾಣಿಗಳು ಕಂಡು ಬಂದರೆ, ಜಿಲ್ಲಾ ಕಂಟ್ರೋಲ್ ರೂಮ್ ನಂಬರ್:0820-2534024ಕ್ಕೆ ತಕ್ಷಣ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ.ವಾಸುದೇವ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಹರೀಶ್ ತಮನಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತ ರಿದ್ದರು.