ದ.ಕ.: ಕೊರೋನ ಲಸಿಕೆ ಬರಲು ಕ್ಷಣಗಣನೆ

Update: 2021-01-11 16:10 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಜ.11: ಮಹಾಮಾರಿ ಕೋವಿಡ್‌ಗೆ ಜ.16ರಿಂದ ದೇಶಾದ್ಯಂತ ಲಸಿಕೆ ಆರಂಭವಾಗುವ ಘೋಷಣೆಯ ತರುವಾಯ ದ.ಕ. ಜಿಲ್ಲೆಯಲ್ಲೂ ಲಸಿಕೆ ಬರಲು ಕ್ಷಣಗಣನೆ ಆರಂಭವಾಗಿದೆ.

ಜಿಲ್ಲೆಯಲ್ಲಿ ಕೊರೋನ ಲಸಿಕೆ ಸಂಗ್ರಹಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ. ಅಧಿಕಾರಿಗಳು ಲಸಿಕೆಯ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಪ್ರಥಮ ಹಂತದಲ್ಲಿ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಕೊರೋನ ವಾರಿಯರ್‌ಗಳಿಗೆ ಲಸಿಕೆ ನೀಡಲಾಗುತ್ತದೆ.

ಲಸಿಕೆಗಾಗಿ ಈಗಾಗಲೇ 42,300ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಅವಧಿಯನ್ನು ಮಂಗಳವಾರ ರಾತ್ರಿ 12 ಗಂಟೆಯವರೆಗೆ ವಿಸ್ತರಿಸಲಾಗಿದ್ದು, ಇನ್ನಷ್ಟು ಮಂದಿ ನೋಂದಣಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಈ ಲಸಿಕೆಯು ಸೋಮವಾರ ರಾತ್ರಿ ಅಥವಾ ಮಂಗಳವಾರ ಬೆಂಗಳೂರಿಗೆ ಆಗಮಿಸಲಿದೆ. ಬಳಿಕ ಎರಡು ದಿನದೊಳಗೆ ಜಿಲ್ಲೆಗೆ ಪೂರೈಕೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆ, ಆರೋಗ್ಯ ಕೇಂದ್ರ ಸೇರಿದಂತೆ ಇದುವರೆಗೆ 515 ಕಡೆಗಳಲ್ಲಿ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ ಮಾಡಲಾಗಿದೆ. 100ಕ್ಕಿಂತ ಕಡಿಮೆ ಲಸಿಕೆ ಬೇಡಿಕೆಯಿರುವ ಕಡೆಗಳಲ್ಲಿ 2-3 ಕೇಂದ್ರಗಳನ್ನು ವಿಲೀನಗೊಳಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News