×
Ad

ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಗಿತ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Update: 2021-01-12 11:53 IST

ಮಂಗಳೂರು, ಜ.12: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯಾರಂಭಗೊಂಡಿರುವ ಮಂಗಳೂರು ಸ್ಮಾರ್ಟ್ ಸಿಟಿಯ ಎಲ್ಲಾ ಕಾಮಗಾರಿಗಳು ಸ್ಥಗಿತಗೊಂಡಿರುವುದನ್ನು ವಿರೋಧಿಸಿ ಮನಪಾ ಪ್ರತಿಪಕ್ಷವಾದ ಕಾಂಗ್ರೆಸ್ ವತಿಯಿಂದ ಮಂಗಳವಾರ ಪಾಲಿಕೆಯ ಕೇಂದ್ರ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಸ್ಮಾರ್ಟ್ ಸಿಟಿ ಯೋಜನೆ ಮಂಗಳೂರಿಗೆ ಬರಲು ಕಾಂಗ್ರೆಸ್‌ನ ಪರಿಶ್ರಮವಿತ್ತು. ಆದರೆ ಬಿಜೆಪಿ ಆಡಳಿತ ಯೋಜನೆಯನ್ನು ಸಮರ್ಪಕವಾಗಿ ಕಾರ್ಯಗತಗೊಳಿಸಲು ವಿಫಲವಾಗಿದೆ ಎಂದರು.

ಮನಪಾ ಪ್ರತಿಪಕ್ಷ ನಾಯಕ ಅಬ್ದುಲ್ ರವೂಫ್ ಬಜಾಲ್ ಮಾತನಾಡಿ, ಮನಪಾ ಆಡಳಿತವು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾತ್ರೋರಾತ್ರಿ ಕಾಮಗಾರಿ ನಡೆಸಿ ಸಾರ್ವಜನಿಕರು ಪರದಾಡುವಂತೆ ಮಾಡಿದೆ ಎಂದು ಆರೋಪಿಸಿದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.ಲೋಬೋ,  ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮುಡಾ ಮಾಜಿ ಅಧ್ಯಕ್ಷ ಸುರೇಶ್ ಬಲ್ಲಾಳ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಲೀಂ, ವಿಶ್ವಾಸ್ ಕುಮಾರ್ ದಾಸ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೊ, ಮಾಜಿ ಮೇಯರ್‌ಗಳಾದ ಹರಿನಾಥ್, ಜೆಸಿಂತಾ ಆಲ್ಫ್ರೆಡ್, ಮಾಜಿ‌ ಉಪಮೇಯರ್‌ ಮುಹಮ್ಮದ್ ಕುಂಜತ್ತಬೈಲ್, ಕಾರ್ಪೊರೇಟರ್‌ಗಳಾದ ಶಶಿಧರ ಹೆಗ್ಡೆ, ನವೀನ್ ಡಿಸೋಜ, ಲತೀಫ್ ಕಂದಕ್, ಎಸಿ ವಿನಯರಾಜ್, ಶಂಸುದ್ದೀನ್ ಕುದ್ರೋಳಿ, ಪ್ರವೀಣ್ ಚಂದ್ರ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News