ನ್ಯಾಯಾಂಗ ನಿಂದನೆ ಕಾಯ್ದೆ ಪ್ರಶ್ನಿಸಿ ಪಿಐಎಲ್: ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2021-01-13 14:47 GMT

ಬೆಂಗಳೂರು, ಜ.13: ಮುಕ್ತ ವಾಕ್ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುವ ನ್ಯಾಯಾಂಗ ನಿಂದನೆ ಕಾಯ್ದೆ–1971ರ ಸೆಕ್ಷನ್ 2(ಸಿ)(ಐ)ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್, ಎನ್.ರಾಮ್, ಕೇಂದ್ರದ ಮಾಜಿ ಸಚಿವ ಅರುಣ್ ಶೌರಿ, ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಕೆಲಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಕಾಯ್ದೆಯ ಸೆಕ್ಷನ್ 2(ಸಿ)(ಐ) ಇದರ ಸಾಂವಿಧಾನಿಕ ಸಿಂಧುತ್ವ ಪ್ರಶ್ನೆ ಮಾಡಿರುವುದರಿಂದ ಅಟಾರ್ನಿ ಜನರಲ್ ಆಫ್ ಇಂಡಿಯಾ ಅವರಿಗೂ ನೋಟಿಸ್ ಜಾರಿ ಮಾಡಿದೆ.

ಎನ್. ರಾಮ್, ಅರುಣ್ ಶೌರಿ ಮತ್ತು ಪ್ರಶಾಂತ್ ಭೂಷಣ್ 2020ರ ಆಗಸ್ಟ್ ನಲ್ಲಿ ಇದೇ ಕೋರಿಕೆಯುಳ್ಳ ಅರ್ಜಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದರು. ಅರ್ಜಿ ಇತ್ಯರ್ಥಪಡಿಸಿದ್ದ ಸುಪ್ರೀಂಕೋರ್ಟ್, ಪುನಃ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವ ಅವಕಾಶವನ್ನು ಮುಕ್ತವಾಗಿ ಇರಿಸಿತ್ತು. ಈ ಮೂವರೂ ಕೋರ್ಟ್ ನಲ್ಲಿ ವಿಚಾರಣೆ ವೇಳೆ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News