ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಪುಟ ಅಸ್ತು

Update: 2021-01-13 17:15 GMT

ಬೆಂಗಳೂರು, ಜ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಹೊರತುಪಡಿಸಿ ರಾಜ್ಯದ ಉಳಿದೆಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಟ್ಟಡಗಳ ಮೌಲ್ಯದ ಶೇ.0.5ರಷ್ಟಿದ್ದ ತೆರಿಗೆ ಪ್ರಮಾಣವನ್ನು ಶೇ.1.5ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ತೆರಿಗೆ ಹೆಚ್ಚಳದಿಂದ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಆದಾಯ ಸಂಗ್ರಹದಲ್ಲಿ ವೃದ್ಧಿಯಾಗಲಿದೆ ಎಂದರು.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈವರೆಗೆ ಖಾಲಿ ನಿವೇಶನಗಳಿಗೆ ಯಾವುದೇ ತೆರಿಗೆ ವಿಧಿಸುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ಒಂದು ಸಾವಿರ(1,000) ಚದರ ಅಡಿಗಿಂತಲೂ ಹೆಚ್ಚು ವಿಸ್ತೀರ್ಣದ ಖಾಲಿ ನಿವೇಶನಗಳಿಗೆ ತೆರಿಗೆ ವಿಧಿಸಲು ಸಚಿವ ಸಭೆ ನಿರ್ಧರಿಸಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ಆಸ್ತಿ ತೆರಿಗೆ ಪರಿಷ್ಕರಣೆಗೆ ಪೂರಕವಾಗಿ ಕರ್ನಾಟಕ ನಗರಾಡಳಿತ ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರಕಾರ, ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತ್ತು. ಆ ಹಿನ್ನೆಲೆಯಲ್ಲಿ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮಾಧುಸ್ವಾಮಿ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News