ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ: ಒಂದು ವಾರದಲ್ಲಿ ರೈತರಿಗೆ ಪರಿಹಾರ ಒದಗಿಸಲು ಹೈಕೋರ್ಟ್ ಸೂಚನೆ

Update: 2021-01-13 18:20 GMT

ಬೆಂಗಳೂರು, ಜ.13: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ರೈತರಿಗೆ 2016-17ನೆ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ನಷ್ಟ ಪರಿಹಾರ ವಿಲೇವಾರಿ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಒಂದು ವಾರದಲ್ಲಿ ರೈತರಿಗೆ ಪರಿಹಾರ ಒದಗಿಸಲು ರಾಜ್ಯ ಸರಕಾರಕ್ಕೆ ಸೂಚಿಸಿದೆ. 

ಈ ಕುರಿತು ಯಾದಗಿರಿ ಜಿಲ್ಲೆಯ ಅಖಂಡ ಕರ್ನಾಟಕ ರೈತ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರಕಾರವೇ ಗುರುತಿಸಿರುವ 189 ರೈತರಿಗೆ ಪರಿಹಾರ ಒದಗಿಸಬೇಕೆಂದು ಸೂಚನೆ ನೀಡಿತು.

ಮಹಾರಾಷ್ಟ್ರ ಮತ್ತು ಗುಜರಾತ್ ನಂತರ ಅತಿ ಹೆಚ್ಚು ರೈತ ಸಾವುಗಳಿಗೆ ರಾಜ್ಯ ಸಾಕ್ಷಿಯಾಗಿದೆ. ಕಳೆದ 20 ವರ್ಷಗಳಲ್ಲಿ 40,346 ರೈತರು ತಮ್ಮ ಜೀವ ಕಳೆದುಕೊಂಡಿದ್ದಾರೆ. 2017ರಲ್ಲಿ 2,160 ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದರೆ, 2018ರಲ್ಲಿ 2,405 ರೈತ ಸಾವುಗಳು ಸಂಭವಿಸಿವೆ. 2018-2019ರಲ್ಲಿ ಶಹಾಪುರ ತಾಲೂಕು ಒಂದರಲ್ಲೇ ಒಟ್ಟು 98 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅರ್ಜಿಯಲ್ಲಿ ತಿಳಿಸಲಾಗಿತ್ತು.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವಲ್ಲಿ ವೈಫಲ್ಯ ಕಂಡುಬಂದಿದೆ. ಬೆಳೆ ನಷ್ಟ ನಿಭಾಯಿಸಲು ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ಪಿಎಂಎಫ್‍ಬಿವೈ ಎಂಬುದು ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಡ್ಡಾಯವಾಗಿ ಜಾರಿಗೆ ತರಬೇಕಾದ ಬೆಳೆ ವಿಮಾ ಯೋಜನೆಯಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News