ಬ್ಲ್ಯಾಕ್‍ಮೇಲ್ ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಸಿಎಂಗೆ ಇದೆಯೇ?: ಸಿದ್ದರಾಮಯ್ಯ

Update: 2021-01-14 11:52 GMT

ಬೆಂಗಳೂರು, ಜ. 14: ‘ಬಿಎಸ್‍ವೈ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಚಿವ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹಾಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ' ಎಂದು ಆಕ್ರೋಶ ಹೊರಹಾಕಿದ್ದಾರೆ.

‘ಸಿ.ಡಿ ತೋರಿಸಿ ಯಡಿಯೂರಪ್ಪ ಅವರನ್ನು ಬೆದರಿಸಿ, ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಬ್ಲ್ಯಾಕ್‍ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ?' ಎಂದು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News