ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಪಟ್ಟು: ಸಿಡಿ ಪ್ರದರ್ಶಿಸಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು

Update: 2021-01-15 17:22 GMT

ಬೆಂಗಳೂರು, ಜ.15: ರಾಜ್ಯ ಬಿಜೆಪಿಯಲ್ಲಿ ಕೇಳಿಬರುತ್ತಿರುವ ಸಿಡಿ ವಿಚಾರ ಕುರಿತು ಸಂಪೂರ್ಣ ತನಿಖೆಯಾಗಬೇಕು. ಜತೆಗೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಕೈಯಲ್ಲಿ ಸಿಡಿಗಳನ್ನು ಹಿಡಿದು ಪ್ರದರ್ಶಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಶುಕ್ರವಾರ ನಗರದ ರೇಸ್‍ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಮುಂಭಾಗ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ನೇತೃತ್ವದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಿಡಿಗಳನ್ನು ಪ್ರದರ್ಶಿಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಸ್.ಮನೋಹರ್, ರಾಜ್ಯ ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಆಪರೇಶನ್ ಕಮಲದ ಮೂಲಕ ಅಧಿಕಾರ ಪಡೆದು ಕೋಟ್ಯಂತರ ರೂ. ಹಣವನ್ನು ಲೂಟಿ ಮಾಡಿದೆ ಎಂದು ಈ ಹಿಂದೆಯೇ ಕಾಂಗ್ರೆಸ್ ಆರೋಪಿಸಿತ್ತು. ಇಂದು ಬಿಜೆಪಿ ಪಕ್ಷದವರೇ ಕಾಂಗ್ರೆಸ್ ಆರೋಪವನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ನೂತನ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಬಿಜೆಪಿ ಶಾಸಕರಾದ ಎಚ್.ವಿಶ್ವನಾಥ್, ಎಂ.ಪಿ.ರೇಣುಕಾಚಾರ್ಯ ಮಾತನಾಡಿ ಮೆಗಾಸಿಟಿ ಹಗರಣ ದಾಖಲೆ ಇದ್ದು, ಅದನ್ನು ಕೂಡಲೆ ಬಿಡುಗಡೆ ಮಾಡುತ್ತೇವೆ ಎಂದು ಸವಾಲು ಎಸೆದಿದ್ದಾರೆ. ಹಾಗಾದರೆ ಹಗರಣದಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ಸಚಿವರನ್ನಾಗಿ ಮಾಡುವ ಅವಶ್ಯಕತೆ ಬಿಜೆಪಿ ಪಕ್ಷಕ್ಕೆ ಇದೆಯೇ. ಅಲ್ಲದೆ, ಬಿಜೆಪಿ ಭ್ರಷ್ಟಾಚಾರದ ಪರ ಇರುವ ಪಕ್ಷ ಹಾಗೂ ಸರಕಾರ ಎಂದು ಬಹಿರಂಗವಾಗಿರುವ ಹಿನ್ನೆಲೆಯಲ್ಲಿ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು  ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಜನಾರ್ಧನ್ ಎ.ಆನಂದ್, ಎಂ.ಎ.ಸಲೀಂ, ಈ.ಶೇಖರ್, ಪ್ರಕಾಶ್ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News