ರೋಷನ್ ಬೇಗ್ ಪತ್ನಿ, ಪುತ್ರನ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ

Update: 2021-01-15 13:09 GMT

ಬೆಂಗಳೂರು, ಜ.15: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಆರ್.ರೋಷನ್ ಬೇಗ್ ಅವರ ಪತ್ನಿ ಸಬೀಹಾ ರೋಷನ್ ಮತ್ತು ಪುತ್ರ ರುಮಾನ್ ಬೇಗ್ ರಹಮಾನ್ ಅವರನ್ನು ಮುಂದಿನ ವಿಚಾರಣೆಯವರೆಗೂ ಬಂಧಿಸದಂತೆ ಸುಪ್ರೀಂಕೋರ್ಟ್ ಸೂಚಿಸಿದೆ. 

ರೋಷನ್ ಬೇಗ್ ಹಾಗೂ ಅವರ ಕುಟುಂಬದವರು ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣೆ ಮುಂದುವರಿಸದಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ ನಲ್ಲಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಬೇಗ್ ಕುಟುಂಬದವರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ದಿನೇಶ್ ಮಹೇಶ್ವರಿ ಮತ್ತು ಹೃಶಿಕೇಷ್ ರಾಯ್ ಅವರಿದ್ದ ತ್ರಿಸದಸ್ಯ ಪೀಠ, ಕರ್ನಾಟಕ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಆರೋಪಿಗಳನ್ನು ಮುಂದಿನ ವಿಚಾರಣೆಯವರೆಗೂ ಬಂಧಿಸಬಾರದು ಎಂದು ಸೂಚಿಸಿತು.

ಬೇಗ್ ಮತ್ತು ಕುಟುಂಬದವರ ವಿರುದ್ಧ ಸಲ್ಲಿಕೆಯಾಗಿದ್ದ ಖಾಸಗಿ ದೂರಿನ ಕುರಿತು ತನಿಖೆ ನಡೆಸುವಂತೆ ವಿಚಾರಣಾ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. 2012ರಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, 2014ರಲ್ಲಿ ಪ್ರಕರಣ ಮುಕ್ತಾಯಗೊಳಿಸಲು ಶಿಫಾರಸು ಮಾಡಿ ಬಿ ರಿಪೋರ್ಟ್ ಸಲ್ಲಿಸಿದ್ದರು.

2018ರ ಮೇ ತಿಂಗಳಲ್ಲಿ ಬಿ ರಿಪೋರ್ಟ್ ತಿರಸ್ಕರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸಬೀಹಾ ರೋಷನ್ ಮತ್ತು ರುಮಾನ್ ಬೇಗ್ ವಿರುದ್ಧ ವಿಚಾರಣೆ ಆರಂಭಿಸಲು ಸೂಚಿಸಿತ್ತು. ರೋಷನ್ ಬೇಗ್ ಶಾಸಕರಾಗಿದ್ದ ಕಾರಣದಿಂದ ಅವರ ವಿರುದ್ಧ ವಿಚಾರಣೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು, ಸಲ್ಲಿಸುವಂತೆ ತನಿಖಾಧಿಕಾರಿಗೆ ನ್ಯಾಯಾಲಯ ನಿರ್ದೇಶನ ನೀಡಿತು.

ಆರೋಪಿತರು 56.71 ಲಕ್ಷ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವ ಮಾಹಿತಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ವರದಿಯಲ್ಲಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಹೈಕೋರ್ಟ್ ಗೆ ತಿಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News