ಬೆಂಗಳೂರಿನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಅಗತ್ಯ ಸಿದ್ಧತೆ: ರಾಜನಾಥ್ ಸಿಂಗ್

Update: 2021-01-15 16:10 GMT

ಬೆಂಗಳೂರು, ಜ.15: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರೋ ಇಂಡಿಯಾ-2021ಗೆ ಸಂಬಂಧಿಸಿದಂತೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಅಪೆಕ್ಸ್ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಸಿದ್ಧತೆಗಳ ಕುರಿತು ಇಂದಿನ ಸಭೆಯಲ್ಲಿ ಪರಿಶೀಲನೆ ನಡೆಸಲಾಗಿದ್ದು, ಎಲ್ಲ ಸಿದ್ಧತೆಗಳು ತಮಗೆ ತೃಪ್ತಿ ತಂದಿವೆ ಎಂದರು.

ದೇಶದಲ್ಲಿನ ವೈಮಾನಿಕ ಕ್ಷೇತ್ರದ ಬೆಳವಣಿಗೆಗೆ ಕರ್ನಾಟಕದ ಕೊಡುಗೆ ಅಪಾರವಾದದ್ದು, ಬೆಂಗಳೂರಿಗೆ ವೈಮಾನಿಕ ಪ್ರದರ್ಶನಗಳನ್ನು ನಡೆಸಿ ಸಾಕಷ್ಟು ಅನುಭವವಿದೆ. ಇಷ್ಟೊಂದು ಅನುಭವ ದೇಶದ ಬೇರೆ ಯಾವುದೆ ನಗರಗಳಿಗೂ ಇಲ್ಲ. ಆದುದರಿಂದ ಈ ಬಾರಿಯೂ ಅತ್ಯಂತ ಯಶಸ್ವಿ ಹಾಗೂ ಅದ್ಧೂರಿಯಾಗಿ ವೈಮಾನಿಕ ಪ್ರದರ್ಶನ ನಡೆಯಲಿದೆ ಎಂದು ಅವರು ಹೇಳಿದರು.

ಕಳೆದ ಬಾರಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಸಂದರ್ಭದಲ್ಲಿ ನಡೆದಂತಹ ದುರ್ಘಟನೆಗಳು ಮರುಕಳಿಸದಂತೆ ರಕ್ಷಣಾ ಇಲಾಖೆಯು ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ಅಲ್ಲದೆ, ಕೋವಿಡ್ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.

ಸಭೆಯಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಕ್ಷಣಾ ವಸ್ತು ಪ್ರದರ್ಶನ ಸಂಸ್ಥೆಯ ನಿರ್ದೇಶಕ ಅಚಲ್ ಮಲ್ಹೋತ್ರಾ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News