ಜ.18 ರಿಂದ ರಾಜ್ಯದಲ್ಲಿ ‘ಗೋಹತ್ಯೆ ನಿಷೇಧ ಕಾಯ್ದೆ' ಜಾರಿ

Update: 2021-01-16 14:04 GMT

ಬೆಂಗಳೂರು, ಜ. 16: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ(ಗೋಹತ್ಯೆ ನಿಷೇಧ ಮಸೂದೆ) ಮತ್ತು ಸಂರಕ್ಷಣಾ ಅಧ್ಯಾದೇಶ ಇದೇ ಜ.18ರಿಂದ ರಾಜ್ಯದಲ್ಲಿ ಜಾರಿಯಾಗಲಿದ್ದು, ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

ಶನಿವಾರ ಪಶು ಸಂಗೋಪನಾ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಬಿ.ಎನ್.ಪ್ರವೀಣ್ ಆದೇಶ ಹೊರಡಿಸಿದ್ದು, ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬರಲಿದ್ದು ನಿಯಮಗಳನ್ನು ರೂಪಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು ಶೀಘ್ರದಲ್ಲೆ ಅವುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜಾನುವಾರು ಸಾಗಾಣಿಕೆ ಸಂಬಂಧಿಸಿದಂತೆ ಕೂಡಲೇ ನಿಯಮಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ರೈತರು, ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಣೆ ಮಾಡುವವರು ಯಾವುದೇ ಕಾರಣಕ್ಕೂ ಗೊಂದಲಕ್ಕೀಡಾಗುವ ಅಗತ್ಯವಿಲ್ಲ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಾಣೆ ಮಾಡುವವರು ತಮ್ಮ ಸಂಪೂರ್ಣ ವಿಳಾಸ, ಆಧಾರ್ ಸಂಖ್ಯೆ, ಮೊಬೈಲ್‍ಸಂಖ್ಯೆ, ಸಾಗಾಣೆ ಉದ್ದೇಶ, ಜಾನುವಾರುಗಳ ವಯಸ್ಸು ಸೇರಿದಂತೆ ದೃಢೀಕರಣ ನೀಡಬೇಕು ಎಂದು ಸೂಚಿಸಲಾಗಿದೆ.

ಪೊಲೀಸ್ ಇಲಾಖೆಯು ಗೋವುಗಳ ಸಂರಕ್ಷಣೆಯಲ್ಲಿ ತೊಡಗಿರುವ ಸ್ವಯಂ ಸೇವಾ ಸಂಸ್ಥೆಗಳು(ಎನ್‍ಜಿಒ) ಹಾಗೂ ಪ್ರಾಣಿ ಕಲ್ಯಾಣ ಮಂಡಳಿಯ ಜೊತೆಗೆ ಕೈಜೋಡಿಸಲು ಹಾಗೂ ಎಲ್ಲ ಹಂತಗಳಲ್ಲಿ ಕಾಯ್ದೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಅಲ್ಲದೆ, ಗೋಹತ್ಯೆ, ಅಕ್ರಮ ಸಾಗಾಟದ ಮೇಲೆ ಪೊಲೀಸ್ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆ ಹೆಚ್ಚು ನಿಗಾವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

ಅಕ್ರಮ ಗೋವುಗಳ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಆ ಜಿಲ್ಲೆ ಅಥವಾ ತಾಲೂಕಿನ ವ್ಯಾಪ್ತಿಯ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲು ಸಾರ್ವಜನಿಕರಿಗೆ ಮನವಿ ಮಾಡುತ್ತೇನೆ ಎಂದು ಪ್ರಭು ಚೌಹಾಣ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಸಾರ್ವಜನಿಕರು ಉದ್ವೇಗದಲ್ಲಿ ಕಾನೂನನ್ನು ಯಾವುದೇ ಕಾರಣಕ್ಕೂ ಕೈಗೆತ್ತಿಕೊಳ್ಳಬಾರದು. ಒಂದು ವೇಳೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲವಾದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಗೋಹತ್ಯೆ ನಿಷೇಧದ ಹಿನ್ನೆಲೆಯಲ್ಲಿ ಗೋವುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಸಿಎಂ ಜತೆ ಚರ್ಚೆ ಮಾಡಿ ಹಂತ-ಹಂತವಾಗಿ ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು'

-ಪ್ರಭು ಚೌಹಾಣ್, ಪಶುಸಂಗೋಪನಾ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News