ಉಡುಪಿ ಜಿಲ್ಲೆ ತ್ಯಾಜ್ಯಮುಕ್ತಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯ: ದಿನಕರ ಬಾಬು

Update: 2021-01-16 14:38 GMT

ಉಡುಪಿ, ಜ.16: ಸ್ವಚ್ಛತೆಯಲ್ಲಿ ಉಡುಪಿ ಜಿಲ್ಲೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಮುಂದೆಯೂ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಜಿಲ್ಲೆಯ ಮೇಲೆ ಇರಿಸಿರುವ ವಿಶ್ವಾಸವನ್ನು ಉಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.

ಶನಿವಾರ ತೆಂಕನಿಡಿಯೂರು ಸಮುದಾಯ ಭವನದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಪಂ ಉಡುಪಿ ಹಾಗೂ ಗ್ರಾಪಂ ತೆಂಕನಿಡಿಯೂರು ಇವುಗಳ ಜಂಟಿ ಆಶ್ರಯದಲ್ಲಿನಡೆದ ಹಸಿ ತ್ಯಾಜ್ಯ ಮತ್ತು ಕೋಳಿ ತ್ಯಾಜ್ಯದಿಂದ ಸಾವಯವ ಗೊಬ್ಬರ ತಯಾರಿಕೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಾಗಾರದಲ್ಲಿ ‘ನಮ್ಮ ನಡಿಗೆ - ತ್ಯಾಜ್ಯ ಮುಕ್ತ ಕಡೆಗೆ’ವಿಶೇಷ ಆಂದೋಲನಕ್ಕೆ ಚಾಲನೆ  ನೀಡಿ ಅವರು ಮಾತನಾಡುತಿದ್ದರು.

ರಾಜ್ಯದ ಇತರೆ ಜಿಲ್ಲೆಯವರು ಕೂಡಾ ಉಡುಪಿ ಜಿಲ್ಲೆಯಲ್ಲಿ ಹಮ್ಮಿ ಕೊಂಡಿರುವ ಎಸ್.ಎಲ್.ಆರ್.ಎಂ. ಘಟಕಗಳನ್ನು ವೀಕ್ಷಿಸಿ ತಮ್ಮ ತಮ್ಮ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಿದ್ದು, ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯು ಮಾದರಿ ಜಿಲ್ಲೆಯಾಗಿರುವುದು ಹೆಮ್ಮೆಯ ವಿಷಯ. ಆದುದರಿಂದ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿ ಎಲ್ಲರೂ ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ವೈ.ನವೀನ್ ಭಟ್, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಡುಪಿ ತಾಪಂ ಸದಸ್ಯ ಧನಂಜಯ್ ಕುಂದರ್, ಉಡುಪಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಮೋಹನ್ ‌ರಾಜ್, ತೆಂಕನಿಡಿಯೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಪಾಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News