ಮಹಾರಾಷ್ಟ್ರ ಮುಖ್ಯಮಂತ್ರಿಯಿಂದ ಉದ್ಧಟತನ ಪ್ರದರ್ಶನ: ಯಡಿಯೂರಪ್ಪ ಕಿಡಿ

Update: 2021-01-18 05:20 GMT

ಬೆಂಗಳೂರು, ಜ.18: ಗಡಿ ವಿವಾದವನ್ನು ಮತ್ತೆ ಕೆಣಕಿರುವ ಮಹಾರಾಷ್ಟ್ರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದು, 'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉದ್ಧಟತನ ಪ್ರದರ್ಶಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಎಸ್ ವೈ, “ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ’’

“ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ” ಎಂದು ಯಡಿಯೂರಪ್ಪ ಹೇಳಿದ್ದಾರೆ.

“ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ರವಿವಾರ ಹೇಳಿದ್ದರು. ಅವರ ಈ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News