ಕರ್ನಾಟಕದ ಒಂದಿಂಚು ಭೂಮಿ ಕೊಡುವ ಪ್ರಶ್ನೆಯೇ ಇಲ್ಲ: ಸಿಎಂ ಯಡಿಯೂರಪ್ಪ

Update: 2021-01-18 13:37 GMT

ಉಡುಪಿ, ಜ.18: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಖಂಡನೀಯ. ಯಾವುದೇ ಕಾರಣಕ್ಕೂ ಕರ್ನಾಟಕದ ಒಂದು ಇಂಚು ಭೂಮಿ ನೀಡುವ ಪ್ರಶ್ನೆ ಉದ್ಭವ ಆಗುವುದಿಲ್ಲ. ಇದರಲ್ಲಿ ರಾಜಕೀಯ ಮಾಡುವುದನ್ನು ಇನ್ನಾದರೂ ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿನ ಎರಡು ದಿನಗಳ ಪ್ರವಾಸದ ಹಿನ್ನೆಲೆಯಲ್ಲಿ ಇಂದು ಆದಿ ಉಡುಪಿ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಉದ್ಧವ್ ಠಾಕ್ರೆ ಹೇಳಿಕೆ ಉದ್ಧಟತನದಿಂದ ಕೂಡಿದೆ. ಇದು ಭಾರತೀಯ ಒಕ್ಕೂಟ ವ್ಯವಸ್ಥೆಗೆ ವಿರುದ್ಧ ವಾದ ನಿಲುವು. ಮಹಾಜನ್ ವರದಿ ಅಂತಿಮ ಎಂದು ಎಲ್ಲರಿಗೂ ಗೊತ್ತಿದ್ದರೂ ಕೂಡ ಮತ್ತೆ ಮತ್ತೆ ಈ ವಿಚಾರವನ್ನು ತೆಗೆಯಲಾಗುತ್ತಿದೆ ಎಂದರು.

ಕರ್ನಾಟಕದಲ್ಲಿ ಕನ್ನಡಿಗರು ಮತ್ತು ಮರಾಠಿಗರು ಒಂದೇ ತಾಯಿಯ ಮಕ್ಕಳಂತೆ ಬದುಕುತ್ತಿದ್ದರೆ, ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ಕನ್ನಡಿಗರು ಮರಾಠಿಗರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಯುತ ವಾತಾವರಣ ಕೆಡಿಸುವಂತಹ ಮತ್ತು ಅಶಾಂತಿ ಮೂಡಿಸುವ ಪ್ರಯತ್ನ ಮಾಡುವುದು ಉದ್ಧವ್ ಠಾಕ್ರೆಗೆ ಗೌರವ ತರುವಂತದ್ದಲ್ಲ ಎಂದು ಮುಖ್ಯ ಮಂತ್ರಿ ಹೇಳಿದರು.

ಉದ್ಧವ್ ಠಾಕ್ರೆ ಹೇಳಿಕೆಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಸಾಮಾನ್ಯವಾಗಿ ಎಲ್ಲ ಕನ್ನಡಿಗರಿಗೂ ನೋವು ತರುವಂತ ಸಂಗತಿಯಾಗಿದೆ. ಈ ರೀತಿಯ ರಾಜಕೀಯ ಹೇಳಿಕೆಗೆ ಯಾರೂ ಕೂಡ ತಲೆಕೆಡಿಸಿಕೊಳ್ಳಬಾರದು. ಅನೇಕ ಬಾರಿ ಈ ಬಗ್ಗೆ ಸ್ಪಷ್ಟಪಡಿಸಿದರೂ ರಾಜಕೀಯ ದುರುದ್ದೇಶದಿಂದ ಈ ರೀತಿ ಗೊಂದಲ ಉಂಟು ಮಾಡುತ್ತಿದ್ದಾರೆ. ಇದರ ಬಗ್ಗೆ ನಾವೆಲ್ಲರೂ ಒಂದಾಗಿದ್ದೇವೆ ಮತ್ತು ಒಗ್ಗಟ್ಟಾಗಿರೋಣ ಎಂದು ಹೇಳಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ಸುಕುಮಾರ್ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು ಸ್ವಾಗತಿಸಿದರು. ಬಳಿಕ ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಮಂಗಳೂರು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರಾಯ್, ಎಸ್ಪಿ ವಿಷ್ಣುವರ್ಧನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News