ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

Update: 2021-01-19 11:41 GMT

ಬೆಂಗಳೂರು, ಜ.19: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮತ್ತೆ ಗುರುವಾರಕ್ಕೆ ಮುಂದೂಡಿದೆ. 

ಜಾಮೀನು ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‍ನ ನ್ಯಾಯಪೀಠದಲ್ಲಿ ನಡೆಯಿತು. ಕೆಲಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠ, ಜಾಮೀನು ಅರ್ಜಿಯ ವಿಚಾರಣೆಯನ್ನು ಜ.21ಕ್ಕೆ ಮುಂದೂಡಿತು. 

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 2020ರ ಸೆ.4ರಂದು ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಎನ್‍ಡಿಪಿಎಸ್ ಮತ್ತು ಐಪಿಸಿ ಕಾಯಿದೆಗಳಡಿಯಲ್ಲಿ ರಾಗಿಣಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ರಾಗಿಣಿ, ವಿಚಾರಣಾ ನ್ಯಾಯಾಲಯ, ಹೈಕೋರ್ಟ್‍ನಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. 

ಕಳೆದ ಮೂರು ತಿಂಗಳಿನಿಂದ ರಾಗಿಣಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಸದ್ಯ ಸುಪ್ರೀಂಕೋರ್ಟ್‍ನಲ್ಲೂ ಅವರಿಗೆ ನಿರಾಸೆ ಆಗಿದೆ. ಡ್ರಗ್ಸ್ ಜಾಲದ ಜೊತೆಗೆ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಸೆ.4ರಂದು ಅವರ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ನಂತರ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ರಾಗಿಣಿ ವಿರುದ್ಧ ಎನ್‍ಡಿಪಿಎಸ್ ಆಕ್ಟ್ 27ಎ ಅಡಿ ಪ್ರಕರಣ ದಾಖಲಾಗಿದ್ದು, ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸರಕಾರಿ ವಕೀಲರು ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News