ನಾಳೆಯಿಂದ ಹಂತ, ಹಂತವಾಗಿ ಗಡಿ ಪ್ರದೇಶಗಳು ಬಂದ್: ವಾಟಾಳ್ ನಾಗರಾಜ್

Update: 2021-01-20 17:20 GMT

ಬೆಂಗಳೂರು, ಜ.20: ಬೆಳಗಾವಿ ಗಡಿ ವಿಷಯದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ನಾಳೆಯಿಂದ ಹಂತ, ಹಂತವಾಗಿ ಗಡಿ ಪ್ರದೇಶಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದೆಂದು ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಬುಧವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಪದೇ ಪದೇ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿದೆ. ಇದಕ್ಕೆ ಸರಿಯಾದ ಉತ್ತರ ನೀಡದೇ ಇದ್ದರೆ, ಇದು ಅಂತ್ಯ ಕಾಣುವುದಿಲ್ಲವೆಂದು ತಿಳಿಸಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ರಚನೆ ಮಾಡಿದಕ್ಕಾಗಿ ಮಹಾರಾಷ್ಟ್ರ ಕಡೆಯಿಂದ ಇಂತಹ ಹೇಳಿಕೆ ಬರುತ್ತಿದೆ. ಸರಕಾರ ಕೂಡಲೇ ಮರಾಠ ಅಭಿವೃದ್ಧಿ ನಿಗಮವನ್ನು ಹಿಂಪಡೆಯಬೇಕು. ಈ ನಿಟ್ಟಿನಲ್ಲಿ ನಾಳೆಯಿಂದ ಗಡಿ ಪ್ರದೇಶಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಗಡಿ ಪ್ರದೇಶಗಳಲ್ಲಿ ಹಲವು ಸಮಸ್ಯೆಗಳಿವೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡುವ ನಿಟ್ಟಿನಲ್ಲಿ ಕನ್ನಡ ಒಕ್ಕೂಟದ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ. ಕನ್ನಡ ನಾಡು, ನುಡಿಯ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವ ಪ್ರಶ್ನೆಯೇ ಇಲ್ಲವೆಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಡಾ.ರಾಜ್‍ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆಯ ಕೆ.ಆರ್.ಕುಮಾರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಮಂಜುನಾಥ್ ದೇವು, ಮಾಜಿ ಸಚಿವೆ ಲಲಿತಾ ನಾಯಕ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News