ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ

Update: 2021-01-21 14:42 GMT

ಧಾರವಾಡ, ಜ.21: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‍ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.

ಬುಧವಾರ ಅರ್ಜಿ ವಿಚಾರಣೆಯ ನಡೆದ ಸಂದರ್ಭದಲ್ಲಿ ಜಮೀನು ಕೊಡದಂತೆ ಸಿಬಿಐ ಪರ ವಕೀಲರು ಮನವಿ ಮಾಡಿದ್ದರು. ಜತೆಗೆ ಸೂಕ್ತ ದಾಖಲೆ ನೀಡಲು ಒಂದು ದಿನದ ಕಾಲಾವಕಾಶ ಕೇಳಿದ್ದರು. ಹೀಗಾಗಿ, ಗುರುವಾರ ವಿಚಾರಣೆ ಮುಂದುವರಿಸಿದ ನ್ಯಾಯಮೂರ್ತಿ ಕೆ.ಎನ್.ನಟರಾಜ ಅವರಿದ್ದ ನ್ಯಾಯಪೀಠ ಜಮೀನು ಅರ್ಜಿಯನ್ನು ವಜಾಗೊಳಿಸಿತು.

ಮಾಜಿ ಸಚಿವ ವಿನಯ್ ಕುಲಕರ್ಣಿ ಪರವಾಗಿ ಹಿರಿಯ ವಕೀಲರು ಶಶಿಕಿರಣ ಶೆಟ್ಟಿ ಹಾಗೂ ಬಾಹುಬಲಿ ಧನವಾಡೆ ವಾದ ಮಂಡಿಸಿದರು. ಇದೇ ವೇಳೆ, ಸಿಬಿಐ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಪ್ರತಿವಾದಿಸಿದರು.

ಧಾರವಾಡದ ಜಿಲ್ಲಾ ನ್ಯಾಯಾಲಯದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಸಹ ವಿನಯ್ ಜಾಮೀನು ಅರ್ಜಿ ತಿರಸ್ಕಾರಗೊಂಡಿತ್ತು. ಆಮೇಲೆ ವಿನಯ್ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್‍ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆ, ವಿನಯ್ ಪರ ವಕೀಲರು ಸುಪ್ರೀಂಕೋರ್ಟ್ ಮೊರೆ ಹೋಗುವ ನಿರೀಕ್ಷೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News