ಹುಣಸೋಡು ದುರಂತದಲ್ಲಿ ಮಡಿದವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಯಡಿಯೂರಪ್ಪ

Update: 2021-01-22 11:43 GMT

ಬೆಂಗಳೂರು, ಜ.2: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಕಳೆದ ರಾತ್ರಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ ಐವರು ಮೃತರಾಗಿದ್ದಾರೆಂಬ ಮಾಹಿತಿ ಇದೆ.ಈಗಾಗಲೇ ಸಂಸದ ರಾಘವೇಂದ್ರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಸ್ಥಳಕ್ಕೆ ಭೇಟಿ ನೀಡಿ ಮೊಕ್ಕಾಂ ಹೂಡಿದ್ದಾರೆ ಎಂದರು.

ಈಗಾಗಲೇ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳವನ್ನು ಕರೆಸಲಾಗಿದ್ದು, ತನಿಖೆಗೆ ಸೂಚಿಸಲಾಗಿದೆ. ತನಿಖೆಯ ಬಳಿಕ ಪ್ರಾಥಮಿಕ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ನೀಡಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದ ಮುಖ್ಯಮಂತ್ರಿ, ಜಿಲ್ಲೆಯ ಇತರ ಭಾಗಗಳಲ್ಲೂ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಇವುಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಈಗಾಗಲೇ 6 ಕಡೆಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಿದ್ದೇವೆ. ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಈಗಾಗಲೇ ಘಟನೆ ಸಂಬಂಧ ಕ್ರಶರ್ ಮಾಲಕ ಸುಧಾಕರ್ ಸೇರಿದಂತೆ ಇನ್ನಿಬ್ಬರನ್ನು ಬಂಧಿಸಲಾಗಿದೆ. ಘಟನಾ ಸ್ಥಳಕ್ಕೆ ನಾಳೆ ಭೇಟಿ ನೀಡುತ್ತೇನೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News