ಶಿವಮೊಗ್ಗದ ಕಲ್ಲುಗಣಿ ಪ್ರದೇಶದಲ್ಲಿ ಭಾರೀ ಸ್ಫೋಟ: ಕಾರ್ಮಿಕರ ದೇಹಗಳು ಛಿದ್ರ ಛಿದ್ರ

Update: 2021-01-22 16:26 GMT

ಶಿವಮೊಗ್ಗ, ಜ.22: ನಗರದ ಹೊರವಲಯದಲ್ಲಿರುವ ಕಲ್ಲುಗಣಿ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟದಿಂದ ಭಾರಿ ಅನಾಹುತ ಸಂಭವಿಸಿದ್ದು, ಸ್ಫೋಟಕ್ಕೆ 5 ಕಾರ್ಮಿಕರು ಬಲಿಯಾಗಿದ್ದಾರೆ. ಲಾರಿಯಲ್ಲಿದ್ದ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿವೆ.

ಶಿವಮೊಗ್ಗ ಸಮೀಪದ ಹುಣಸೋಡು ಬಳಿ ಕಲ್ಲು ಕ್ವಾರಿಯಲ್ಲಿ ಲಾರಿಯಲ್ಲಿದ್ದ ಜಿಲೆಟಿನ್ ಕಡ್ಡಿ ಇಳಿಸುವಾಗ ಜಿಲೆಟಿನ್ ಕಡ್ಡಿ ಪರಸ್ಪರ ತಗಲಿದ ಪರಿಣಾಮ ಸ್ಫೋಟಗೊಂಡಿದೆ ಎನ್ನಲಾಗಿದೆ. ಘಟನೆಯಿಂದ ಬಿಹಾರ ಮೂಲದ 5 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಲಾರಿಯಲ್ಲಿ 50ಕ್ಕೂ ಹೆಚ್ಚು ಜಿಲೆಟಿನ್ ಬಾಕ್ಸ್ ಗಳಿದ್ದವು ಎನ್ನಲಾಗಿದೆ.

ರಾತ್ರಿ 10.25ರ ಸುಮಾರಿಗೆ ಭಾರೀ ಸ್ಫೋಟ ಸಂಭವಿಸಿದ್ದು, ಶಿವಮೊಗ್ಗ ಜಿಲ್ಲೆ, ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ ಜಿಲ್ಲೆಗೂ ಭಾರೀ ಸ್ಫೋಟದ ಸದ್ದು ಕೇಳಿದೆ. ಆರಂಭದಲ್ಲಿ ಇದು ಭೂ ಕಂಪನವೆಂದು ಹೇಳಲಾಗಿತ್ತಾದರೂ, ನಂತರ ಕಲ್ಲು ಗಣಿಯಲ್ಲಿ ನಡೆದ ಸ್ಫೋಟವೆಂದು ಗೊತ್ತಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೂರ್ವ ವಲಯ ಐಜಿಪಿ ರವಿ, ಜಿಲ್ಲಾಧಿಕಾರಿ ಶಿವಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಶಾಂತರಾಜು ಪರಿಶೀಲನೆ ನಡೆಸಿದ್ದಾರೆ. ಶುಕ್ರವಾರ ಬೆಳಗ್ಗೆ ಬಾಂಬ್ ನಿಷ್ಕ್ರಿಯ ದಳ, ಬಾಂಬ್ ಪತ್ತೆ ದಳ, ಶ್ವಾನದಳ ಹಾಗೂ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಚಿವ ಈಶ್ವರಪ್ಪ ಭೇಟಿ: ಹುಣಸೋಡು ಕಲ್ಲು ಕ್ವಾರೆಯಲ್ಲಿ ಸ್ಫೋಟಗೊಂಡ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರೀ ಜಿಲೆಟಿನ್ ಕಡ್ಡಿಯಿಂದ ಇಷ್ಟೊಂದು ಪ್ರಮಾಣದಲ್ಲಿ ಸ್ಫೋಟವಾಗಲು ಸಾಧ್ಯವೇ ಇಲ್ಲ. ಆದ್ದರಿಂದ ತಜ್ಞರ ತಂಡು ಬಂದ ಪರಿಶೀಲನೆ ನಡೆಸಿ, ವರದಿ ನೀಡಿದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಈ ಹಿಂದೆ ಹಲವಾರು ಬಾರಿ ಕ್ರಮ ಕೈಗೊಳ್ಳಲಾಗಿದೆ. ಮುಂದೆಯೂ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಈಗ ಪ್ರಶ್ನೆ ಇರುವುದು ಅಕ್ರಮವೋ, ಸಕ್ರಮವೋ ಅನ್ನುವುದಲ್ಲ. ಇಷ್ಟೊಂದು ಅಗಾಧ ಪ್ರಮಾಣದ ಸ್ಫೋಟಕ್ಕೆ ಕಾರಣವೇನು? ಬರೀ ಜಿಲೆಟಿಕ್ ಕಡ್ಡಿಯಿಂದ ಇಷ್ಟೊಂದು ಪ್ರಮಾಣದಲ್ಲಿ ಸ್ಫೋಟ ಸಂಭವಿಸಲು ಸಾಧ್ಯವಿದೆಯೇ? ಅಥವಾ ಬೇರೆ ಏನಾದರೂ ಇತ್ತೇ ಅನ್ನುವ ಕುರಿತು ಪರಿಶೀಲನೆ ನಡೆಯಬೇಕಿದೆ. ತಜ್ಞರ ತಂಡ ಪರಿಶೀಲನೆ ನಡೆಸಿ, ವರದಿ ನೀಡಿದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗವುದು ಎಂದರು. ಇಂತಹ ಘಟನೆಯನ್ನು ನಾನೆಂದೂ ಕಂಡು, ಕೇಳಿಲ್ಲ. ನಮ್ಮನೆಯಲ್ಲೂ ಕಿಟಕಿ, ಬಾಗಿಲು ನಲುಗಿ ಹೋಗಿವೆ ಎಂದು ತಿಳಿಸಿದ್ದಾರೆ.

ಬಿ.ವೈ. ರಾಘವೇಂದ್ರ ಭೇಟಿ: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಪರಿಶೀಲನೆ ನಡೆಸಿದ್ದು, ರಾತ್ರಿ ಭಾರಿ ಶಬ್ದ ಕೇಳಿ ಬಂದ ನಂತರ ಅರ್ಧ ಗಂಟೆಯೊಳಗೆ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳವನ್ನು ಪತ್ತೆ ಮಾಡಿ ಪರಿಶೀಲನೆ ನಡೆಸಿದ್ದಾರೆ. ತಜ್ಞರ ತಂಡ ತನಿಖೆ ನಂತರವಷ್ಟೇ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ ಎಂದು ಹೇಳಿದರು.

ಪ್ರಧಾನಿ ಸಂತಾಪ: ಸಮೀಪದ ಹುಣಸೋಡು ಬಳಿ ಕಲ್ಲುಗಣಿಗಾರಿಕೆ ಸ್ಥಳದಲ್ಲಿ ಡೈನಮೈಟ್ ಸ್ಫೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಪ್ರಾಣಹಾನಿ ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದು, ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಸಂತಾಪ: ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಕಲ್ಲು ಗಣಿಗಾರಿಕೆ ಕ್ವಾರೆಯಲ್ಲಿ ಸ್ಫೋಟ ಸಂಭವಿಸಿದೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಭವಿಷ್ಯದಲ್ಲಿ ಈ ರೀತಿಯ ದುರಂತಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಪ್ರಹ್ಲಾದ್ ಜೋಶಿ ಸಂತಾಪ
ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ಲಾರಿಯಲ್ಲಿದ್ದ ಜಿಲೆಟಿನ್ ಕಡ್ಡಿ ಸ್ಫೋಟಗೊಂಡು ಐವರು ಕಾರ್ಮಿಕರು ಸಾವನ್ನಪ್ಪಿರುವುದು ದುರದೃಷ್ಟಕರ. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಅವರ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಚೇತರಿಸಿಕೊಳ್ಳಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಾರ್ಥಿಸಿದ್ದಾರೆ.

5 ಲಕ್ಷ ರೂ. ಪರಿಹಾರ, ಉನ್ನತ ಮಟ್ಟದ ತನಿಖೆಗೆ ಆದೇಶ
ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ 5 ಮಂದಿ ಸಾವನ್ನಪ್ಪಿರುವ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಹುಣಸೋಡು ಘಟನೆಗೆ ಸಂಬಂಧಿಸಿದಂತೆ ಸಿಎಂ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಕುಟುಂಬದವರಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರೆಲ್ಲರೂ ಶೀಘ್ರದಲ್ಲಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದು, ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಸಿಎಂ ಹೇಳಿದ್ದಾರೆ.

ವಶಕ್ಕೆ: ಕಲ್ಲುಗಣಿಗಾರಿಕೆ ಪ್ರದೇಶದಲ್ಲಿ ಸ್ಫೋಟಗೊಂಡ ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ಮುಖಂಡ ನರಸಿಂಹ ಗಂಧದ ಮನೆ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಇದೇ ಪ್ರಕರಣ ಸಂಬಂಧ ಕಲ್ಲುಗಣಿ ಪ್ರದೇಶದ ಗುತ್ತಿಗೆದಾರ ಸುಧಾಕರ್‌ನನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನರಸಿಂಹ ಕಲ್ಲುಗಣಿಗಾರಿಕೆಗೆ ಜಿಲೆಟಿನ್ ಕಡ್ಡಿ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಸುಧಾಕರ್ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದ. ನರಸಿಂಹ ಕಲ್ಲುಕೊಟ್ಟರೆ, ಸುಧಾಕರ್ ಕಲ್ಲು ಪುಡಿಮಾಡುತ್ತಿದ್ದ. ಈ ಕಲ್ಲು ಗಣಿಗಾರಿಕೆ ನರಸಿಂಹ ಮತ್ತು ಸುಧಾಕರ್ ಪಾಲುದಾರಿಕೆಯಲ್ಲಿ ನಡೆಯುತ್ತಿತ್ತು ಎನ್ನಲಾಗಿದೆ.

ಸಿಬಿಐ ತನಿಖೆಗೆ ಆಗ್ರಹ: ಘಟನಾ ಸ್ಥಳಕ್ಕೆ ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಅಕ್ರಮ ಗಣಿಗಾರಿಕೆ ರೂವಾರಿಯೇ ಸಚಿವ ಈಶ್ವರಪ್ಪ ಎಂದು ಆರೋಪಿಸಿದ್ದಾರೆ.

ಅಕ್ರಮ ಗಣಿಗಾರಿಕೆಯಲ್ಲಿ ಮಾವ -ಅಳಿಯ ಪಾಲುದಾರರಾಗಿದ್ದಾರೆ. ಈಶ್ವರಪ್ಪ ಮುಖ್ಯಮಂತ್ರಿಗಳಿಗಿಂತ ಅತ್ಯಂತ ಪ್ರಭಾವಿಯಾಗಿದ್ದು, ಅಧಿಕಾರಿಗಳ ಕೈ ಕಟ್ಟಿ ಹಾಕಿದ್ದಾರೆ. ಸರ್ಕಾರದ ಹೆಸರಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಸಿಬಿಐ ತನಿಖೆ ನಡೆಸಿದರೆ ಇವರ ಅಕ್ರಮಗಳು ಹೊರಗೆ ಬರುತ್ತವೆ. ಈಶ್ವರಪ್ಪನವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸಿಬಿಐ ತನಿಖೆಗೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.

ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ: ಸಚಿವ ಮುರುಗೇಶ್ ನಿರಾಣಿ
ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದರು.

ಅವರು ಶುಕ್ರವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇಲ್ಲಿ ಕಲ್ಲು ಗಣಿಗಾರಿಕೆ ಅಧಿಕೃತವಾಗಿ ನಡೆಯುತ್ತಿತ್ತೇ ಅಥವಾ ಅನಧಿಕೃತವಾಗಿತ್ತೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಆದಷ್ಟು ಬೇಗನೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು. ಘಟನೆಯನ್ನು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಲೋಪದೋಷಗಳನ್ನು ಪತ್ತೆಹಚ್ಚಲಾಗುವುದು. ಗಣಿಗಾರಿಕೆಗೆ ಸ್ಫೋಟಕ ಎಲ್ಲಿಂದ ಬಂತು, ಇದಕ್ಕೆ ಪರವಾನಿಗೆ ಇತ್ತೆ, ಸ್ಫೋಟಕ ಸಾಗಣಿಕೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಪಾಲಿಸಲಾಗಿದೆಯೇ ಎಂಬ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಇಂತಹ ದುರ್ಘಟನೆಗಳು ಆಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಅಭಿವೃದ್ಧಿಗೆ ಜಲ್ಲಿ ಕಲ್ಲುಗಳ ಪೂರೈಕೆ ಅನಿವಾರ್ಯ. ಆದರೆ ಪರವಾನಿಗೆ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಲಾಗುವುದಿಲ್ಲ. ಶಿವಮೊಗ್ಗ ಜಿಲ್ಲೆಯಲ್ಲಿ ಅನಧಿಕೃತ ಗಣಿಗಾರಿಕೆ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

5 ಮಂದಿ ಮೃತ್ಯು: ಗುರುವಾರ ರಾತ್ರಿ ಸಂಭವಿಸಿದ ಸ್ಫೋಟದಲ್ಲಿ 5 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮುಖ್ಯಮಂತ್ರಿಯವರು ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ಈಗಾಗಲೇ ಘೋಷಿಸಿದ್ದಾರೆ. ಇನ್ನುಳಿದಂತೆ ಕಾರ್ಮಿಕ ಇಲಾಖೆ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಮೃತರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ ಹಾಗೂ ಸಹಾಯ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News