ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ವಾಟಾಳ್ ನಾಗರಾಜ್ ವಿರುದ್ಧ ಪ್ರಕರಣ ದಾಖಲು

Update: 2021-01-22 18:01 GMT

ಬೆಂಗಳೂರು, ಜ.22: ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿ ದಂಡ ಪಾವತಿ ಮಾಡದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ವಿರುದ್ಧ ಇಲ್ಲಿನ ಎಸ್.ಜೆ. ಪಾರ್ಕ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಜನರನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಿದ ಆರೋಪದಡಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರಿಗೆ ನ್ಯಾಯಾಲಯ ವಿಧಿಸಿದ್ದ ದಂಡ ಪಾವತಿಸದ ಕಾರಣ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಒಕ್ಕೂಟ ಡಿ.5ರಂದು ಟೌನ್‍ಹಾಲ್ ಮುಂದೆ ಪ್ರತಿಭಟನೆ ನಡೆಸಿತು. ಈ ವೇಳೆ ವಾಟಾಳ್ ನಾಗರಾಜ್ ಸೇರಿದಂತೆ ನೂರಾರು ಜನರು ಕೊರೋನ ಮಾರ್ಗಸೂಚಿ ಉಲ್ಲಂಘಿಸಿದ್ದರು ಎನ್ನಲಾಗಿದೆ. ಈ ಸಂಬಂಧ ವಾಟಾಳ್ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆ-2020 ತಿದ್ದುಪಡಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. 50 ಸಾವಿರ ರೂ. ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿತ್ತು.

ಇದರಂತೆ ಎಸ್.ಜೆ. ಪಾರ್ಕ್ ಪೊಲೀಸರು ದಂಡ ಪಾವತಿಸುವಂತೆ ಡಿ.19ರಂದು ವಾಟಾಳ್ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಜ. 21ರೊಳಗೆ ದಂಡ ಪಾವತಿಸುವಂತೆ ಗಡುವು ನೀಡಿದರೂ ಪಾವತಿಸದ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಎಸ್.ಜೆ.ಪಾರ್ಕ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News