ಅಕ್ರಮ ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ

Update: 2021-01-23 12:10 GMT

ಬೆಂಗಳೂರು, ಜ. 23: ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಅಕ್ರಮ ಗಣಿಗಾರಿಕೆ ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು. ಕಾನೂನು ಬಾಹಿರ ಗಣಿಗಾರಿಕೆ ಚಟುವಟಿಕೆಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರವಾನಿಗೆ ಹೊಂದಿರುವವರು ಮಾತ್ರ ಕಾನೂನಿನ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಸರಕಾರದ ಅನುಮತಿ ಪಡೆಯದೇ ಯಾರಾದರೂ ಕಾನೂನು ಬಾಹಿರವಾಗಿ ಗಣಿಗಾರಿಕೆ ನಡೆಸುವುದು ಕಂಡುಬಂದರೆ ಕ್ರಮ ಜರುಗಿಸಲಾಗುವುದು ಎಂದರು.

ಪರವಾನಿಗೆ ಪಡೆದು ಗಣಿಗಾರಿಕೆ ನಡೆಸಲು ಅಭ್ಯಂತರವಿಲ್ಲ. ಆದರೆ, ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸುವವರ ಮೇಲೆ ಹದ್ದಿನ ಕಣ್ಣಿಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾನೂನು ವ್ಯಾಪ್ತಿ ಮೀರಿದರೆ ಪ್ರಭಾವಿಗಳಿರಲಿ, ಎಷ್ಟೇ ದೊಡ್ಡವರಿರಲಿ ಅವರ ಮೇಲೆ ಕಾನೂನು ಕ್ರಮ ನಿಶ್ಚಿತ ಎಂದು ಯಡಿಯೂರಪ್ಪ ಎಚ್ಚರಿಸಿದರು.

ಶಿವಮೊಗ್ಗ ಅವಘಡಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ತಪ್ಪಿತಸ್ಥರು ಯಾರೇ ಇದ್ದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಗಳು ವಿಚಾರಣೆ ನಂತರ ಹೊರಬರಬೇಕಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದ ಅವರು, ಭವಿಷ್ಯದಲ್ಲಿ ಇಂತಹ ಅವಘಡಗಳು ಸಂಭವಿಸದಂತೆ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಇದೇ ವೇಳೆ ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News