ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಸೂಕ್ತ: ಸಚಿವ ಕೆ.ಎಸ್.ಈಶ್ವರಪ್ಪ

Update: 2021-01-23 18:21 GMT

ಧಾರವಾಡ, ಜ.23: ರಾಜ್ಯದಲ್ಲಿ ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೊಳಿಸುವುದು ಸೂಕ್ತ ಎಂಬುದು ನನ್ನ ವೈಯಕ್ತಿಕವಾಗಿ ಅಭಿಪ್ರಾಯವಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸಂವಿಧಾನ ತಿದ್ದುಪಡಿ ಕೋರಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವ ಉದ್ದೇಶವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಇಲ್ಲಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ 140ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಅಧ್ಯಕ್ಷ, ಉಪಾಧ್ಯಕ್ಷರು, ಸ್ಥಾಯಿ ಸಮಿತಿಗಳ ಅಧ್ಯಕ್ಷರ ನೂತನ ಕೊಠಡಿಗಳ ಕಟ್ಟಡ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸೇರಿ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಬದಲಿಗೆ ಎರಡು ಹಂತದ ವ್ಯವಸ್ಥೆ ಜಾರಿಗೊಳ್ಳಬೇಕು ಎಂಬ ಅಭಿಪ್ರಾಯವಿದೆ ಎಂದರು.

ಇದಕ್ಕೆ ನನ್ನ ಸಂಪೂರ್ಣ ಸಹಮತವಿದೆ. ಸಂವಿಧಾನದಲ್ಲಿ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಸೂಚಿಸಿರುವುದರಿಂದ ಅನುಷ್ಠಾನ ಅನಿವಾರ್ಯವಾಗಿದೆ. ಇದನ್ನು ಬದಲಾಯಿಸಲು ಕೋರಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ಸಂವಿಧಾನಕ್ಕೆ ತಿದ್ದುಪಡಿಯಾದರೆ ಮಾತ್ರ ಬದಲಾವಣೆ ಸಾಧ್ಯ ಎಂದು ಈಶ್ವರಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಬೃಹತ್, ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶೆಟ್ಟರ್, ಶಾಸಕರಾದ ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ.ಪಂ.ಸಿಇಓ ಡಾ.ಬಿ.ಸುಶೀಲಾ, ಸದಸ್ಯರಾದ ಚೈತ್ರಾ ಗುರುಪಾದಪ್ಪ ಶಿರೂರ, ರೇಣುಕಾ ಇಬ್ರಾಹಿಂಪುರ, ಚನ್ನಬಸಪ್ಪ ಮಟ್ಟಿ, ಕರಿಯಪ್ಪ ಮಾದರ ಸೇರಿದಂತೆ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News