ರಾಜ್ಯಾದ್ಯಂತ ಅಕ್ರಮ ಗಣಿಗಾರಿಕೆಗೆ ತಕ್ಷಣ ಕಡಿವಾಣ ಹಾಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಮುಖ್ಯಮಂತ್ರಿ

Update: 2021-01-24 05:53 GMT

ಶಿವಮೊಗ್ಗ, ಜ.24: ರಾಜ್ಯಾದಂತ ಹಲವೆಡೆ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳನ್ನು ತಕ್ಷಣ ನಿಲ್ಲಿಸಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ ಹೆಲಿಪ್ಯಾಡ್‍ನಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲಾಗುವುದು ಎಂದು ಹೇಳಿಲ್ಲ. ಗಣಿಗಾರಿಕೆ ನಡೆಸುತ್ತಿರುವವರು ಪರವಾನಿಗೆಗೆ ಅರ್ಜಿ ಸಲ್ಲಿಸಿದ ಬಳಿಕ, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಯಾರಿಗೂ ಅನಾನುಕೂಲ ಆಗದೇ ಇದ್ದರೆ ಕಾನೂನು ಚೌಕಟ್ಟಿನಲ್ಲಿ ಮಾತ್ರ ಅನುಮತಿ ನೀಡಬಹುದಾಗಿದೆ. ಆದರೆ ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಎಲ್ಲೆಡೆ ಅಕ್ರಮ ಗಣಿಗಾರಿಕೆ ಸಮಸ್ಯೆ ಇದೆ. ಮಂಡ್ಯದ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೆಆರ್‍ಎಸ್ ಜಲಾಶಯಕ್ಕೆ ಧಕ್ಕೆ ಉಂಟಾಗುವ ಅಪಾಯವಿದೆ. ಆದ್ದರಿಂದ ಇಲ್ಲಿ ಗಣಿಗಾರಿಕೆಯನ್ನು  ಸಂಪೂರ್ಣವಾಗಿ ನಿಲ್ಲಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ನಿರ್ಮಾಣ  ಕಾರ್ಯಗಳಿಗೆ ಜಲ್ಲಿಕಲ್ಲು ಬೇಕು. ಕಾನೂನು ಚೌಕಟ್ಟಿನಲ್ಲಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಸಾಂಪ್ರದಾಯಿಕವಾಗಿ ಕಲ್ಲುಗಳನ್ನು ಒಡೆದು ಜಲ್ಲಿಕಲ್ಲು ಮಾಡುವವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಭಿವೃದ್ಧಿ ಕಾಮಗಾರಿಗಳಿಗೆ ಜಲ್ಲಿಕಲ್ಲು ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅಕ್ರಮ ಗಣಿಗಾರಿಕೆ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಸಿದರು.

ಎಫ್‍ಡಿಎ ಪರೀಕ್ಷೆ ಪತ್ರಿಕೆ ಸೋರಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ಉನ್ನತ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದಿದ್ದೇನೆ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು. ಪರೀಕ್ಷಾ ಅಕ್ರಮಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಇದೊಂದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯಬಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಲಾಗುವುದು ಎಂದರು.

ಜವರಿ 26ರಂದು ರಾಜ್ಯದಲ್ಲಿ ರೈತರು ಶಾಂತರೀತಿಯಲ್ಲಿ ಪ್ರತಿಭಟಿಸಲು ಅವಕಾಶವಿದೆ. ನಮ್ಮ ಸರಕಾರ ರೈತಪರವಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News