​ದ.ಕ. ಜಿಲ್ಲಾಡಳಿತದಿಂದ 72ನೆ ಗಣರಾಜ್ಯೋತ್ಸವ

Update: 2021-01-26 10:51 GMT

ಮಂಗಳೂರು : ಮುಂಗಾರು ಬೆಳೆ ಸಮೀಕ್ಷೆ ಯೋಜನೆಯಡಿ 9,19,075 ರೈತರ ಜಮೀನಿನ ಸಮೀಕ್ಷೆ ಮಾಡಲಾಗಿದೆ. ಬೆಳೆ ಸಮೀಕ್ಷೆಯ ಪ್ರಗತಿಯಲ್ಲಿ ಜಿಲ್ಲೆಯು ರಾಜ್ಯದಲ್ಲೇ ಮೂರನೇ ಸ್ಥಾನದಲ್ಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ದ.ಕ.ಜಿಲ್ಲಾಡಳಿತದಿಂದ ನಗರದ ನೆಹರೂ ಮೈದಾನದಲ್ಲಿ ಮಂಗಳವಾರ ನಡೆದ 72ನೆ ಗಣರಾಜ್ಯೋತ್ಸವದ ಸಂದೇಶವನ್ನು ಅವರು ನೀಡಿದರು.

ಜಿಲ್ಲೆಯ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಅನೇಕ ಜನುಪಯೋಗಿ ಯೋಜನೆಗಳನ್ನು ಕೈಗೆತ್ತಿಕೊಂಡಿವೆ. ಆ ಪೈಕಿ ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡಮಿಯು ಬಜ್ಪೆಕೆಂಜಾರಿನಲ್ಲಿ ಸ್ಥಾಪನೆಯಾಗಲಿದೆ. ಅದಕ್ಕಾಗಿ ಕೇಂದ್ರ ಸರಕಾರವು 1 ಸಾವಿರ ಕೋ.ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ನುಡಿದರು.

ಸಂಸದ ನಳಿನ್ ಕುಮಾರ್‌ರ ಸತತ ಪ್ರಯತ್ನದ ಫಲವಾಗಿ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆಯು ಹಸಿರು ನಿಶಾನೆ ತೋರಿಸಿದೆ. ಮುಂದಿನ ದಿನಗಳಲ್ಲಿ ಸ್ಥಳೀಯರಿಗೆ ಉದ್ಯೋಗ ವಕಾಶ ಸಹಿತ ಜಿಲ್ಲೆಯ ಬೆಳವಣಿಗೆಗೆ ಇದು ಪೂರಕವಾಗಲಿದೆ ಎಂದು ಹೇಳಿದರು.

ಶಿರಾಡಿ ಘಾಟ್‌ನಲ್ಲಿ 23.60 ಕಿ.ಮೀ.ಸುರಂಗ ಮಾರ್ಗ ಕಾಮಗಾರಿಯನ್ನು 10 ಸಾವಿರ ಕೋ.ರೂ.ವೆಚ್ಚದಲ್ಲಿ ಆರಂಭಿಸಲಾಗುತ್ತದೆ. ಹಳೆ ಕೇಂದ್ರ ಮಾರುಕಟ್ಟೆ ಜಾಗದಲ್ಲಿ 144 ಕೋ.ರೂ. ವೆಚ್ಚದಲ್ಲಿ 11 ಅಂತಸ್ತಿನ ಮಾರುಕಟ್ಟೆ ನಿರ್ಮಾಣಕ್ಕೆ ಹಾಗೂ 22 ಕೋ.ರೂ. ವೆಚ್ಚದಲ್ಲಿ ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಪಂಪ್‌ವೆಲ್‌ನಲ್ಲಿ 445 ಕೋ.ರೂ. ವೆಚ್ಚದಲ್ಲಿ ಕೇಂದ್ರ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ನುಡಿದರು.

ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಇನ್ಮುಂದೆ ಯಾವುದೇ ಆತಂಕವಿಲ್ಲದೆ ಪದವಿ ಪೂರ್ವ ಶಿಕ್ಷಣದಲ್ಲಿ ವಿಜ್ಞಾನ ವಿಷಯವನ್ನು ತೆಗೆದುಕೊಂಡು ವಿದ್ಯಾಭ್ಯಾಸವನ್ನು ಮುಂದುವರಿಸಲು ಅನುಕೂಲವಾಗುವಂತಹ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಕನ್ನಡ ಮಾಧ್ಯಮದಲ್ಲಿ ವಿಜ್ಞಾನ ವಿಷಯಗಳ ಪಠ್ಯಪುಸ್ತಕಗಳನ್ನು ಮುದ್ರಿಸಲು ಪ್ರಸ್ತಾಪಿಸುವ ಮೂಲಕ ಕನ್ನಡ ಭಾಷೆಯಲ್ಲಿ ವಿಜ್ಞಾನ ಶಿಕ್ಷಣಕ್ಕೆ ಮುಂದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಕುಮಾರ್, ಮೇಯರ್ ದಿವಾಕರ್ ಪಾಂಡೇಶ್ವರ, ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ದ.ಕ.ಜಿಲ್ಲಾ ಎಸ್ಪಿ ಲಕ್ಷ್ಮಿಪ್ರಸಾದ್, ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ.ನ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ ಮತ್ತಿತರರು ಉಪಸ್ಥಿತರಿದ್ದರು.

ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ಅಮೋಘ ನಾರಾಯಣ, ಆಶ್ರಯ ಪಿ., ಓಜಸ್ವಿ, ಆರಾಧನ ಬೇಜಲ್ ಮತ್ತು ಪ್ರಖ್ಯಾತ್ ವೈಬಿ, ಶ್ರೀಜಿತ, ಶ್ರಾವ್ಯಾ ಆರ್., ಕುಲದೀಪ್ ಕುಮಾರ್ ಅವರಿಗೆ 2020-21ನೆ ಸಾಲಿನ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜ್ಯದ ಸರಕಾರಿ ಮತ್ತು ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಜಿಲ್ಲೆಯ 7 ಆಸ್ಪತ್ರೆಗಳಾದ ಇಂಡಿಯಾನ ಹಾಸ್ಪಿಟಲ್ ಆ್ಯಂಡ್ ಹಾರ್ಟ್ ಇನ್‌ಸ್ಟಿಟ್ಯೂಟ್ ಲಿ., ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ, ಯೆನೆಪೊಯ ಸ್ಪೆಶಾಲಿಟಿ ಆಸ್ಪತ್ರೆ ಕೋಡಿಯಾಲ್‌ಬೈಲ್, ದೇರಳಕಟ್ಟೆಯ ಜಸ್ಟಿಸ್ ಕೆಎಸ್ ಹೆಗ್ಡೆ ಚಾರಿಟೇಬಲ್ ಹಾಸ್ಟಿಟಲ್, ಸರಕಾರಿ ಲೇಡಿಗೋಶನ್ ಆಸ್ಪತ್ರೆ, ಪುತ್ತೂರು ತಾಲೂಕು, ಸುಳ್ಯ ತಾಲೂಕು ಆಸ್ಪತ್ರೆಗಳ ಮುಖ್ಯಸ್ಥರು/ಅಧಿಕಾರಿಗಳಿಗೆ ಇಲಾಖಾ ಪ್ರಮಾಣಪತ್ರದೊಂದಿಗೆ ಗೌರವಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News