ಕೋವಿಡ್ ದೆಸೆಯಲ್ಲಿ ಆರೋಗ್ಯ ಕ್ಷೇತ್ರದ ಸಾಮರ್ಥ್ಯ ಹೆಚ್ಚಳ: ರಾಜ್ಯಪಾಲ ವಜುಭಾಯಿ ವಾಲಾ

Update: 2021-01-26 14:19 GMT

ಬೆಂಗಳೂರು, ಜ.26: ಕೋವಿಡ್-19ನ್ನು ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಯಶಸ್ವಿಯಾಗಿದ್ದು, ಇದರ ಜತೆಗೆ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಿ, ಪಿಪಿಇ ಕಿಟ್, ವೆಂಟಿಲೇಟರ್ ಗಳನ್ನು ಹೆಚ್ಚಳ ಮಾಡುವ ಮೂಲಕ ಆರೋಗ್ಯ ಕ್ಷೇತ್ರದ ಸಾಮರ್ಥ್ಯವನ್ನು ವೃದ್ಧಿಸಿಕೊಂಡಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ 72ನೇ ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕೋವಿಡ್ ಬಿಕ್ಕಟ್ಟಿನ ಅವಕಾಶವನ್ನು ರಾಜ್ಯ ಸರಕಾರ ಆರೋಗ್ಯ ಕ್ಷೇತ್ರದ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಬಳಸಿಕೊಂಡಿದೆ. ಈಗ ಕೋವಿಡ್ ನಿಯಂತ್ರಣದ ಕೊನೆಯ ಹಂತಕ್ಕೆ ತಲುಪಿದ್ದೇವೆ. ಈ ಸಮಯದಲ್ಲಿ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ದೈಹಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಬಳಕೆ ಕಡ್ಡಾಯವಾಗಿ ಬಳಕೆ ಮಾಡಬೇಕೆಂದು ಸಲಹೆ ನೀಡಿದ್ದಾರೆ.

ಭಾರತ ಕೋವಿಡ್ ಲಸಿಕೆ ಉತ್ಪಾದಿಸುತ್ತಿದೆ. ಈ ಲಸಿಕೆಗಳನ್ನು ವಿದೇಶಗಳಿಗೂ ಸಹ ರಪ್ತು ಮಾಡುತ್ತಿರುವುದು ಗಮನಾರ್ಹವಾದ ವಿಷಯವಾಗಿದೆ. ಕೇಂದ್ರ ಸರಕಾರದ ಸಹಕಾರದೊಂದಿಗೆ ಪ್ರತಿಯೊಬ್ಬರಿಗೂ ಲಸಿಕೆ ತಲುಪಿಸಲು ಕ್ರಮ ವಹಿಸಲಾಗಿದೆ. ಕೋವಿಡ್ ನಿರ್ವಹಣೆಗೆ ಶ್ರಮಿಸಿದವರು ಎಂದೆಂದಿಗೂ ಹೀರೋಗಳಾಗಿರುತ್ತಾರೆ. ಅವರಿಗೆಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಕೋವಿಡ್ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಮುಂದಿನ ಬಜೆಟ್‍ನಲ್ಲಿ ಕೃಷಿ ವಲಯದಲ್ಲಿ ಬದಲಾವಣೆ ತರಲು, ಜಲಾನಯನದ ಕಡೆ ಗಮನ ಹರಿಸಲಾಗಿದೆ. ಭೂ ರಹಿತ ಕಾರ್ಮಿಕರಿಗೆ ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಉದ್ಯೋಗಾವಕಾಶ ದೊರೆಯಲಿದೆ. ಮೊಬೈಲ್ ಮತ್ತು ತಂತ್ರಜ್ಞಾನ ಆಧಾರಿತ ಬೆಳೆ ಸಮೀಕ್ಷೆ ಅಳವಡಿಕೆ ಮಾಡಲಾಗಿದೆ. ಇದರಿಂದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರಿಗೆ ಸಹಾಯಧನ ಸುಗಮವಾಗಿ ದೊರೆಯಲಿದೆ. ಹಾಗೆಯೇ ಮಹಿಳಾ ಕೇಂದ್ರಿತ ಬಜೆಟ್‍ಗೆ ಆದ್ಯತೆ ನೀಡಲಾಗಿದ್ದು, ಅಂಗನವಾಡಿಗಳು ಮತ್ತು ಮಹಿಳಾ ಆರೋಗ್ಯ ಕಾರ್ಯಕರ್ತೆಯರ ಮೂಲಕ ಗರ್ಭಿಣಿ ಮಹಿಳೆಯರಿಗೆ ಸೇವೆ ನೀಡಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 8,015 ಕೋಟಿ ಅನುಮೋದಿತ ಮೊತ್ತದಲ್ಲಿ ಕೆರಗಳ ಸಂರಕ್ಷಣೆ ಮಾಡಲಾಗಿದೆ. ಬಿಡದಿಯಲ್ಲಿ 210 ಕೋಟಿ ರೂ.ವೆಚ್ಚದಲ್ಲಿ ತ್ಯಾಜ್ಯದಿಂದ ಇಂಧನ ಎಂಬ ಯೋಜನೆ ರೂಪಿಸಲಾಗಿದೆ. ಪೊಲೀಸ್ ಪಡೆಯಲ್ಲಿ ಮಹಿಳಾ ಮೀಸಲಾತಿ ಶೇ.25ಕ್ಕೆ ಹೆಚ್ಚಿಸಲಾಗಿದೆ. ಸಬ್ ಇನ್‍ಸ್ಪೆಕ್ಟರ್ ನೇಮಕಾತಿಗೆ ವಯೋಮಿತಿ ಎರಡು ವರ್ಷ ಹೆಚ್ಚಿಸಲಾಗಿದೆ. ಪೊಲೀಸ್ ಗೃಹ–2025 ಯೋಜನೆಗೆ ಚಾಲನೆ ನೀಡಲಾಗಿದೆ. ಅಗ್ನಿಶಾಮಕ ತುರ್ತುಸೇವೆ ಇಲಾಖೆಯಲ್ಲಿ 1,568 ಹುದ್ದೆ ನೇಮಕ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ತೋಟಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಅದನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ 701 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಲ್ಲದೆ, 15,905 ಹೆಕ್ಟೇರ್ ಪ್ರದೇಶವನ್ನು ಆಧುನಿಕ ನೀರಾವರಿ ವ್ಯವಸ್ಥೆಯಡಿ ತರಲಾಗಿದೆ. ಕೋವಿಡ್ ಸಂದರ್ಭದಲ್ಲಿ ತೋಟಗಾರಿಕೆ ಬೆಳೆಗಾರರಿಗೆ ನೆರವಾಗುವ ಸಲುವಾಗಿ 92,070 ಫಲಾನುಭವಿಗಳಿಗೆ 107 ಕೋಟಿ ರೂ.ನೀಡಲಾಗಿದೆ. ಅದೇ ರೀತಿ ಹೂವು, ತರಕಾರಿ, ಮತ್ತು ಹಣ್ಣು ಬೆಳೆಗಾರರಿಗೆ ಹಣಕಾಸಿನ ನೆರವು ನೀಡಲಾಗಿದೆ ಎಂದು ಅವರು ಹೇಳಿದರು.

ಈ ವೇಳೆ ಮಾಣಿಕ್ ಷಾ ಪರೇಡ್ ಮೈದಾನಕ್ಕೆ ಬಂದ ರಾಜ್ಯಪಾಲರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News