ಶಾಸಕಿ ಸೌಮ್ಯಾರೆಡ್ಡಿ ವಿರುದ್ಧ ಎಫ್‍ಐಆರ್ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿರೋಧ ರ್ಯಾಲಿ

Update: 2021-01-27 17:35 GMT

ಬೆಂಗಳೂರು, ಜ.27: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರ ವಿರುದ್ಧ ದಾಖಲಾದ ಎಫ್‍ಐಆರ್ ಖಂಡಿಸಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ಸಾವಿರಾರು ಮಂದಿ ಕಾರ್ಯಕ್ರರ್ತರು ಪ್ರತಿರೋಧ ರ್ಯಾಲಿ ನಡೆಸಿದರು.

ಬುಧವಾರ ಜಯನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿರೋಧದ ರ್ಯಾಲಿ ನಡೆಸಿ, ಬಿಜೆಪಿ ಸರಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸುತ್ತಿರುವ ಕಾಂಗ್ರೆಸ್‍ನ ಪ್ರಬಲ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಬಿಜೆಪಿ ನಾಯಕರಿಂದ ಸೇಡಿನ ರಾಜಕಾರಣ ನಡೆಯುತ್ತಿದೆ. ದ್ವೇಷದ ರಾಜಕಾರಣವನ್ನು ಬಿಜೆಪಿ ಬಿಡದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರಕಾರ ಜನವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಪೊಲೀಸರು, ಶಾಸಕಿ ಸೌಮ್ಯಾರೆಡ್ಡಿ ಮೇಲೆ ಅಸಭ್ಯವಾಗಿ ವರ್ತಿಸಿದ್ದಾರೆ. ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಹಕ್ಕಾಗಿದೆ. ಅದಕ್ಕೆ ಅವಕಾಶ ಕೊಡದಂತೆ ಪೊಲೀಸರು ವರ್ತಿಸುವುದು ಕಾನೂನಿಗೆ ವಿರುದ್ಧವಾಗಿದೆ. ಆದಾಗ್ಯು, ಶಾಸಕಿ ಸೌಮ್ಯಾರೆಡ್ಡಿ ವಿರುದ್ಧ ಎಫ್‍ಐಆರ್ ದಾಖಲಿಸುವ ಮೂಲಕ ಸಂವಿಧಾನದ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಕೂಡಲೇ ಎಫ್‍ಐಆರ್ ವಾಪಸ್‍ ಪಡೆದು, ಪ್ರಕರಣ ಸಂಬಂಧ ಸೂಕ್ತ ತನಿಖೆ ಆಗಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಾದ ವಿ.ಎಸ್.ಉಗ್ರಪ್ಪ, ಉಮಾಶ್ರೀ, ರಾಮಲಿಂಗಾರೆಡ್ಡಿ, ಬಿ.ಕೆ.ಹರಿಪ್ರಸಾದ್, ಮಾಜಿ ಪಾಲಿಕೆ ಸದಸ್ಯ ಎನ್. ನಾಗರಾಜ್, ಶಾಸಕಿ ಸೌಮ್ಯಾರೆಡ್ಡಿ, ಮಾಜಿ ಮೇಯರ್ ಗಂಗಾಂಬಿಕೆ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News