ಕಲಾಪ ಸಲಹಾ ಸಮಿತಿ ಸಭೆಗೆ ಬಹಿಷ್ಕಾರ: ಕಾಂಗ್ರೆಸ್ ನಿರ್ಧಾರ

Update: 2021-01-28 12:25 GMT

ಬೆಂಗಳೂರು, ಜ.28: ಇಂದಿನಿಂದ ಆರಂಭಗೊಂಡಿರುವ ವಿಧಾನಮಂಡಲದ ಉಭಯ ಸದನಗಳ ಅಧಿವೇಶನಕ್ಕೆ ಸಂಬಂಧಿಸಿದಂತೆ ನಡೆಯುವ ಕಲಾಪ ಸಲಹಾ ಸಮಿತಿಯ ಸಭೆಗಳನ್ನು ಬಹಿಷ್ಕರಿಸಲು ವಿರೋಧ ಪಕ್ಷ ಕಾಂಗ್ರೆಸ್ ನಿರ್ಧರಿಸಿದೆ.

ಗುರುವಾರ ವಿಧಾನಸೌಧದಲ್ಲಿನ ವಿಧಾನಸಭೆಯ ಸಭಾಂಗಣದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮುನ್ನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದಲ್ಲದೆ, ವಿಧಾನಪರಿಷತ್ತಿನ ಉಪ ಸಭಾಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಸಿ.ಕೊಂಡಯ್ಯ ಅವರನ್ನು ಕಣಕ್ಕಿಳಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಸದೆ, ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿರುವುದನ್ನು ಖಂಡಿಸಿ, ರಾಜ್ಯಪಾಲರು ಭಾಷಣ ಮಾಡುವ ವೇಳೆ ಪ್ರತಿಭಟನೆ ನಡೆಸಲು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಲಾಯಿತು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಮ್ ಅಹ್ಮದ್, ಆರ್.ಧೃವನಾರಾಯಣ್, ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ್ ಸಿಂಗ್, ಬಿ.ಕೆ.ಹರಿಪ್ರಸಾದ್, ಕೆ.ಜೆ.ಜಾರ್ಜ್ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News