×
Ad

‘ಸ್ಮಾರ್ಟ್‍ಸಿಟಿ' ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಿ: ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ನಿರ್ದೇಶನ

Update: 2021-01-30 17:44 IST

ಬೆಂಗಳೂರು, ಜ. 30: ‘ಸ್ಮಾರ್ಟ್‍ಸಿಟಿ' ಯೋಜನೆಯಡಿ ಕೈಗೆತ್ತಿಕೊಂಡಿರುವ ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಜತೆಗೆ ಗುಣಮಟ್ಟದ ಕಾಮಗಾರಿಯನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶನಿವಾರ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಬೆಂಗಳೂರು ‘ಸ್ಮಾರ್ಟ್‍ಸಿಟಿ' ಯೋಜನೆಯ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸ್ಮಾರ್ಟ್‍ಸಿಟಿ ಯೋಜನೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.

ಇಲ್ಲಿನ ರೇಸ್‍ಕೋರ್ಸ್ ರಸ್ತೆ, ರಾಜಾರಾಮ್ ಮೋಹನ್‍ರಾಯ್ ರಸ್ತೆ, ಹುಡ್ ಸ್ಟ್ರೀಟ್, ಟಾಟಾಲೇನ್, ಕ್ಯಾಪಿಟಲ್ ಹೋಟೆಲ್-ರಾಜಭವನ ಜಂಕ್ಷನ್ ಮತ್ತು ಪ್ಲಾನೆಟೇರಿಯಂ ರಸ್ತೆ ಸೇರಿದಂತೆ ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ್ದೇವೆ ಎಂದು ಯಡಿಯೂರಪ್ಪ ತಿಳಿಸಿದರು.

ಸ್ಮಾರ್ಟ್‍ಸಿಟಿ ಯೋಜನೆಯಡಿ ಬೆಂಗಳೂರು ನಗರದಲ್ಲಿ ಒಟ್ಟು 37 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲಿ ರಸ್ತೆ ಅಭಿವೃದ್ಧಿ, ಕೋವಿಡ್ ಆಸ್ಪತ್ರೆಗಳಿಗೆ ನೆರವು, ಐಟಿ ಯೋಜನೆಗಳು, ಕಟ್ಟಡ ನಿರ್ಮಾಣ ಮತ್ತು ಇತರ ಕಾಮಗಾರಿಗಳು ಸೇರಿವೆ. ಇದರ ಅಂದಾಜು ವೆಚ್ಚ ಒಟ್ಟು 930 ಕೋಟಿ ರೂ.ಗಳು ಎಂದು ಯಡಿಯೂರಪ್ಪ ವಿವರಿಸಿದರು.

ಉದ್ದೇಶಿತ ಯೋಜನೆಯಡಿ ಈವರೆಗೆ ನಾಲ್ಕು ಕಾಮಗಾರಿಗಳು ಪೂರ್ಣಗೊಂಡಿವೆ. 29 ಕಾಮಗಾರಿಗಳು ಪ್ರಗತಿಯಲ್ಲಿವೆ. ನಾಲ್ಕು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ವರೆಗೆ 103 ಕೋಟಿ ರೂ. ವೆಚ್ಚವಾಗಿದೆ ಎಂದ ಅವರು, ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಸಚಿವರಾದ ಆರ್. ಅಶೋಕ್, ಬೈರತಿ ಬಸವರಾಜ್, ಕೆ.ಗೋಪಾಲಯ್ಯ, ಸಂಸದ ಪಿ.ಸಿ.ಮೋಹನ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News