ಮಂಡ್ಯ, ಹಾಸನ, ಕಾರವಾರದಲ್ಲಿ ಕ್ಯಾನ್ಸರ್ ಕೇರ್ ಘಟಕ ಸ್ಥಾಪನೆ: ಡಾ.ಕೆ.ಸುಧಾಕರ್

Update: 2021-02-01 12:59 GMT

ಬೆಂಗಳೂರು, ಫೆ.1: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಸ್ವಾಯತ್ತ ಸಂಸ್ಥೆಗಳಾದ ಮಂಡ್ಯ, ಹಾಸನ, ಕಾರವಾರ ಜಿಲ್ಲೆಯಲ್ಲಿ ಕ್ಯಾನ್ಸರ್ ಕೇರ್ ಘಟಕಗಳನ್ನು ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸೋಮವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಅ.ದೇವೇಗೌಡ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಪ್ರತಿ ವರ್ಷ 65 ಸಾವಿರ ಜನರು ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದು, ಸದ್ಯ ಪ್ರತಿ ವರ್ಷ ರಾಜ್ಯ ಸರಕಾರ 20 ಸಾವಿರ ಕ್ಯಾನ್ಸರ್ ರೋಗಿಗಳಿಗೆ  ಚಿಕಿತ್ಸೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಮಂಡ್ಯ, ಹಾಸನ, ಕಾರವಾರ ಜಿಲ್ಲೆಗಳಲ್ಲಿ ಕ್ಯಾನ್ಸರ್ ಆಸ್ಪತ್ರೆಗಳನ್ನು ಪ್ರಾರಂಭಿಸುವ ಮೂಲಕ ಕ್ಯಾನ್ಸರ್ ರೋಗವನ್ನು ಹತೋಟಿಗೆ ತರಲಾಗುವುದು ಎಂದು ಹೇಳಿದರು.

ಕಿದ್ವಾಯಿ ಸಂಸ್ಥೆಯ ಅಂಗ ಸಂಸ್ಥೆಯಾಗಿ ತುಮಕೂರಿನಲ್ಲಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಪೆರಿಫೆರಲ್ ಕ್ಯಾನ್ಸರ್ ಕೇಂದ್ರವನ್ನು ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಟೆಂಡರ್ ಪ್ರಕ್ರಿಯೆಯನ್ನೂ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News