ಯುಎಪಿಎ ಅಡಿ ದಾಖಲಾಗಿರುವ ಪ್ರಕರಣಗಳ ವಿವರ ಕೇಳಿದ ಹೈಕೋರ್ಟ್
ಬೆಂಗಳೂರು, ಫೆ.3: ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ(ಯುಎಪಿಎ) ಅಡಿ ದಾಖಲಾಗಿರುವ ಪ್ರಕರಣಗಳೆಷ್ಟು, ಹಾಗೂ ಆ ಪ್ರಕರಣಗಳ ವಿಚಾರಣೆ ಯಾವ ಹಂತದಲ್ಲಿ ಇದೆ ಎಂಬುದರ ವರದಿ ಸಲ್ಲಿಸುವಂತೆ ಹೈಕೋರ್ಟ್ ತನ್ನ ರಿಜಿಸ್ಟ್ರಾರ್ ಜನರಲ್‍ಗೆ ನಿರ್ದೇಶಿಸಿದೆ.
ರಾಷ್ಟ್ರೀಯ ತನಿಖಾ ತಂಡ (ಎನ್‍ಐಎ) ದಾಖಲಿಸಿರುವ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಆರಂಭಿಸುವಂತೆ ಕೋರಿ ಜಯನಗರ ನಿವಾಸಿ ವಸೀಮುದ್ದೀನ್ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಯುಎಪಿಎ ಕಾಯ್ದೆ ಅಡಿ ಈವರೆಗೆ ಎಷ್ಟು ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಸ್ತುತ ಅವುಗಳ ವಿಚಾರಣೆ ಯಾವ ಹಂತದಲ್ಲಿದೆ ಎಂಬುದರ ಕುರಿತು ವಿವರವಾದ ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಬೇಕು ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.
ಏನಿದು ಅರ್ಜಿ: ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ(ಯುಎಪಿಎ) ಅಡಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ವಿಳಂಬವಾಗುತ್ತಿದೆ. ಬಹುತೇಕ ಆರೋಪಿಗಳು ಹೊರ ರಾಜ್ಯದವರೇ ಆಗಿದ್ದಾರೆ. ವಿಚಾರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳು ಜೈಲಿನಲ್ಲಿಯೇ ಉಳಿಯುವಂತಾಗಿದೆ. ಪರಿಣಾಮ ಆರೋಪಿಗಳು ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಸಾಧ್ಯವಾಗದೆ ಮಾನಸಿಕವಾಗಿ ಬಳಲುತ್ತಿದ್ದಾರೆ. ಹೀಗಾಗಿ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಪ್ರತ್ಯೇಕ ವಿಶೇಷ ಕೋರ್ಟ್ ಸ್ಥಾಪಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.