ಮೀಸಲಾತಿ ವಿಚಾರದಲ್ಲಿ ಸರಕಾರದ ಉತ್ತರ ಕೇಳಿದ ಯತ್ನಾಳ್: ಕೇಂದ್ರ ಸರಕಾರದ ಬಳಿ ಹೋಗಿ ಎಂದ ಸಿಎಂ

Update: 2021-02-05 13:16 GMT

ಬೆಂಗಳೂರು, ಫೆ. 5: ರಾಜ್ಯದಲ್ಲಿರುವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗ ‘ಪ್ರವರ್ಗ-2ಎ' ಅಡಿಯಲ್ಲಿ ಮೀಸಲಾತಿ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಇಲ್ಲಿ ಕುಳಿತು ಯಾವುದೇ ತೀರ್ಮಾನವನ್ನು ಕೈಗೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾರ್ಪಣಾ ನಿರ್ಣಯದ ಪ್ರಸ್ತಾವದ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆ ಬಿಜೆಪಿ ಹಿರಿಯ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಪ್ರಸ್ತಾಪಿಸಿ ಮುಖ್ಯಮಂತ್ರಿ ಅವರು ಈಗಲೇ ಹೇಳಿಕೆ ನೀಡಬೇಕು ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ನಮ್ಮದು ಒಂದು ರಾಷ್ಟ್ರೀಯ ಪಕ್ಷ. ಹೀಗಾಗಿ ಅವರೊಂದಿಗೆ ಸಮಾಲೋಚನೆ ನಡೆಸದೆ ಯಾವುದೇ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ ಎಂದರು.

ರಾಜ್ಯದಿಂದ ಆಯ್ಕೆಯಾಗಿರುವ ಇಪ್ಪತ್ತೈದು ಮಂದಿ ಸಂಸದರಿದ್ದಾರೆ. ಅವರನ್ನು ಕೇಂದ್ರ ಸರಕಾರದ ಬಳಿ ಯತ್ನಾಳ್ ಅವರು ಕೊಂಡೊಯ್ಯಲಿ. ರಾಷ್ಟ್ರೀಯ ಮುಖಂಡರನ್ನು ಭೇಟಿ ಮಾಡಲಿ ಎಂದು ಸಲಹೆ ನೀಡಿದ ಯಡಿಯೂರಪ್ಪ, ಯಾವುದೇ ವಿಷಯ ಬಂದರೂ ಕೇಂದ್ರದ ವರಿಷ್ಠರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಯಾವುದೇ ನಿರ್ಧಾರ ಕೈಗೊಳ್ಳುವ ಅಧಿಕಾರ ನನಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಸನಗೌಡ ಪಾಟೀಲ್ ಯತ್ನಾಳ್, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಹೀಗಾಗಿ ಮೀಸಲಾತಿ ಕಲ್ಪಿಸುವ ವಿಚಾರಕ್ಕೆ ರಾಜ್ಯ ಸರಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ನಿರ್ಧಾರ ಕೈಗೊಳ್ಳುವ ಅಧಿಕಾರ ನನಗಿಲ್ಲ

ಯಾವುದೇ ವಿಷಯ ಬಂದರೂ ಕೇಂದ್ರದ ವರಿಷ್ಠರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಯಾವುದೇ ನಿರ್ಧಾರ ಕೈಗೊಳ್ಳುವ ಅಧಿಕಾರ ನನಗಿಲ್ಲ.

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News