ಬೆಂಗಳೂರು: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ರಸ್ತೆಯಲ್ಲಿಯೇ ಅಡುಗೆ ಮಾಡಿದ ಕಾರ್ಯಕರ್ತರು

Update: 2021-02-09 14:59 GMT

ಬೆಂಗಳೂರು, ಫೆ.9: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದಿಢೀರ್ ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ರಸ್ತೆಯಲ್ಲಿಯೇ ಸೌದೆ ಬಳಸಿ ಅಡುಗೆ ಮಾಡುವ ಮೂಲಕ ಆಕ್ರೋಶ ಹೊರಹಾಕಿದರು.

ಮಂಗಳವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಎತ್ತಿನಗಾಡಿ ಓಡಿಸಿ ಮತ್ತು ಸೌದೆ ಬಳಸಿ ಅಡುಗೆ ಮಾಡುವ ಮೂಲಕ ಕಾಂಗ್ರೆಸಿಗರು ತೈಲ ಬೆಲೆ ಏರಿಕೆ ಖಂಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಜನಸಾಮಾನ್ಯರು ನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ ಕೇಂದ್ರ ಸರಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಬದಲಾಗಿ ಶ್ರೀಮಂತರ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಕಾನೂನುಗಳನ್ನು ಜಾರಿಗೊಳಿಸುವಲ್ಲಿ ನಿರತರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಭಾವನಾತ್ಮಕ ವಿಷಯಗಳನ್ನು ರಾಜಕಾರಣ ಮಾಡಿ ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಅಂತರ್‍ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಇದ್ದರೂ ಕೂಡ ಸ್ಥಳೀಯ ತೆರಿಗೆಗಳು ಮತ್ತು ಅಬಕಾರಿ ಸುಂಕಗಳನ್ನು ಹೆಚ್ಚು ಮಾಡಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90ರೂ. ದಾಟುವಂತೆ ಮಾಡಲಾಗಿದೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ಕೇಂದ್ರ ಸರಕಾರವು ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯನ್ನು ಕಡಿಮೆ ಮಾಡದಿದ್ದರೆ ಜಿಲ್ಲಾ ಕೇಂದ್ರಗಳೂ ಸೇರಿದಂತೆ ರಾಜ್ಯದೆಲ್ಲೆಡೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕೋವಿಡ್ ಸಂಕಷ್ಟದಲ್ಲಿ ಜನತೆ ಸಿಲುಕಿದ್ದಾರೆ. ಉದ್ಯೋಗ ಕಳೆದುಕೊಂಡ ಸಾವಿರಾರು ಮಂದಿ ಪರಿತಪಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಬೆಲೆ ಹೆಚ್ಚಳ ಮಾಡುವ ಮೂಲಕ ಕೇಂದ್ರ ಸರಕಾರ ಬಡವರ ಹೊಟ್ಟೆ ಮೇಲೆ ಬರೆ ಎಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಶಾಸಕರಾದ ರಾಮಲಿಂಗಾರೆಡ್ಡಿ, ದಿನೇಶ್‍ಗುಂಡೂರಾವ್, ಕೃಷ್ಣೇಭೈರೇಗೌಡ, ಸೌಮ್ಯಾರೆಡ್ಡಿ, ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ ರೆಡ್ಡಿ, ಕಾಂಗ್ರೆಸ್ ಮುಖಂಡರಾದ ಎಂ.ಉದಯಶಂಕರ್, ಜಿ.ಶೇಖರ್, ರಾಜ್‍ಕುಮಾರ್, ಎಂ.ಡಿ.ಲಕ್ಷ್ಮೀನಾರಾಯಣ ಮತ್ತಿತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News