ಧಿಕ್ಕಾರದ ಘೋಷಣೆಗಳ ನಡುವೆ ವಿಧಾನಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ

Update: 2021-02-09 15:11 GMT

ಬೆಂಗಳೂರು, ಫೆ.9: ಬಿಜೆಪಿ ಸರಕಾರ, ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಸದಸ್ಯರ ಧಿಕ್ಕಾರದ ಘೋಷಣೆಗಳ ನಡುವೆಯೇ ವಿಧಾನಪರಿಷತ್‍ನ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಅನಿರ್ದಿಷ್ಟಾವಧಿ ಮುಂದೂಡಿದರು.

ಮಂಗಳವಾರ ಮಧ್ಯಾಹ್ನದ ಕಲಾಪ ಆರಂಭವಾಗುತ್ತಿದ್ದಂತೆ ಗೋಹತ್ಯೆ ನಿಷೇಧ ಕಾಯ್ದೆ ಅಂಗೀಕಾರಕ್ಕೆ ಸಂಬಂಧಿಸಿದಂತೆ ಸಭಾಪತಿಗಳು ಆದೇಶ ಕೊಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ಮುಂದುವರಿಸಿದರು.

ಈ ವೇಳೆ ಸಭಾಪತಿ ಬಸವರಾಜ ಹೊರಟ್ಟಿ, ಬಾವಿಯಲ್ಲಿರುವ ಕಾಂಗ್ರೆಸ್ ಸದಸ್ಯರು ತಮ್ಮ ಸ್ಥಾನದಲ್ಲಿ ಕುಳಿತು ಅಲ್ಲಿಂದಲೇ ಮಾತನಾಡಬೇಕೆಂದು ಮನವಿ ಮಾಡಿದರು. ಈ ಮಧ್ಯೆ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ, ಸದನವನ್ನು ಹತ್ತು ನಿಮಿಷ ಮುಂದೂಡಿ, ಗೋಹತ್ಯೆ ನಿಷೇಧ ಕಾಯ್ದೆ ಅಂಗೀಕಾರಕ್ಕೆ ಸಂಬಂಧಿಸಿದಂತೆ ಎಲ್ಲ ಪಕ್ಷಗಳ ಪ್ರಮುಖರೊಂದಿಗೆ ಚರ್ಚಿಸಿ, ಆ ನಂತರ ಆದೇಶ ನೀಡಬೇಕೆಂದು ಒತ್ತಾಯಿಸಿದರು. ಇದಕ್ಕೆ ಸಮ್ಮತಿಸಿದ ಸಭಾಪತಿ ಸದನವನ್ನು ಹತ್ತು ನಿಮಿಷ ಮುಂದೂಡಿದರು.

ಪುನಃ ಸದನ ಆರಂಭವಾದಾಗ, ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ಮುಂದುವರಿಸಿದರು. ಈ ಮಧ್ಯೆ ಸಭಾಪತಿ ಬಸವರಾಜ ಹೊರಟ್ಟಿ, ಗೋಹತ್ಯೆ ನಿಷೇಧ ಕಾಯ್ದೆ ಕಾನೂನು ಪ್ರಕಾರವೇ ಅಂಗೀಕೃತಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯರಲ್ಲಿ ಗೊಂದಲಗಳಿದ್ದರೆ ನನಗೆ ತಿಳಿಸಿ, ಪರಿಶೀಲಿಸುತ್ತೇನೆಂದು ತಿಳಿಸಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ, ಬಿಜೆಪಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಈ ನಡುವೆಯೇ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಅಂಗೀಕಾರ ಪಡೆದರು. ಆ ನಂತರ ವಿಧಾನಪರಿಷತ್‍ನ 143ನೇ ಅಧಿವೇಶನದ ಕಾರ್ಯಕಲಾಪಗಳ ವಿವರಗಳ ಸಂಕ್ಷಿಪ್ತ ವರದಿಯನ್ನು ಸಭಾಪತಿ ಬಸವರಾಜ ಹೊರಟ್ಟಿ ಮಂಡಿಸಿ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News