ಶೀಘ್ರವೇ ವಾಲ್ಮೀಕಿ ಮೀಸಲಾತಿ ಶೇ.7.5ಕ್ಕೆ ಹೆಚ್ಚಳ: ಸಿಎಂ ಯಡಿಯೂರಪ್ಪ ಭರವಸೆ

Update: 2021-02-09 17:16 GMT

ದಾವಣಗೆರೆ, ಫೆ.9: ಶೇ.7.5 ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ವಾಲ್ಮೀಕಿ ನಾಯಕ ಸಮುದಾಯದವರ ಬಹುದಿನದ ಬೇಡಿಕೆಯನ್ನು ಶೀಘ್ರವೇ ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಹರಿಹರ ತಾಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ನಡೆದ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿವೃತ್ತ ನ್ಯಾ. ನಾಗಮೋಹನ್‌ದಾಸ್ ಸಮಿತಿ ಆಯೋಗ ಈಗಾಗಲೇ ಸರಕಾರಕ್ಕೆ ವರದಿ ಸಲ್ಲಿಸಿದೆ. ಆ ವರದಿ ಪರಿಶೀಲನೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಾಯಕ ಸಮುದಾಯದ ಸಚಿವರು, ಶಾಸಕರೊಂದಿಗೆ ಚರ್ಚಿಸಿದ ಬಳಿಕ ಸಚಿವ ಸಂಪುಟದಲ್ಲಿ ಪ್ರಸ್ತಾವಿಸಿ ಅತೀ ಶೀಘ್ರದಲ್ಲಿ ಭವಸೆ ಈಡೇರಿಸುವುದಾಗಿ ತಿಳಿಸಿದರು.

ಇದಕ್ಕೂ ಪೂರ್ವದಲ್ಲಿ ಮಾತನಾಡಿದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಮಾರ್ಚ್ 9ರೊಳಗೆ ಮೀಸಲಾತಿ ಕುರಿತು ಸರಕಾರ ನಿರ್ಧಾರ ಪ್ರಕಟಿಸದಿದ್ದರೆ ವಾಲ್ಮೀಕಿ ಜಾತ್ರಾ ಮಹೋತ್ಸವದ ಸ್ಥಳದಲ್ಲಿಯೇ ನಾನು ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇನೆ. ಈ ಸಂದರ್ಭದಲ್ಲಿ ನಾನು ಸತ್ತರೂ ಸರಿ ನಮ್ಮ ವಾಲ್ಮೀಕಿ ಬಂಧುಗಳು ಹೋರಾಟ ಮಾಡಿ ನಮ್ಮ ಹಕ್ಕನ್ನು ಪಡೆಯಬೇಕು ಎಂದು ಹೇಳಿದರು.

ಈ ವೇಳೆ ಪಕ್ಕದಲ್ಲೇ ಇದ್ದ ಯಡಿಯೂರಪ್ಪ ಅವರು ವಿಚಲಿತರಾಗಿ ‘ಬುದ್ಧಿ, ನೀವು ಸಾಯುವ ಬಗ್ಗೆ ಮಾತನಾಡಬಾರದು. ನಿಮ್ಮ ಸಮುದಾಯದ ನೋವು ಅರ್ಥವಾಗುತ್ತಿದೆ. ನಿಮ್ಮ ಬೇಡಿಕೆ ಈಡೇರಿಸಲು ಸರಕಾರ ಬದ್ಧವಾಗಿದೆ’ ಎಂದು ಶ್ರೀಗಳನ್ನು ಸಂತೈಸಿದರು.

ವಾಲ್ಮೀಕಿ ವಿಜಯ ಸ್ಮರಣ ಸಂಪುಟ ಸಂಪಾದಕ ಡಾ.ಎ.ಬಿ.ರಾಮಚಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿಯ ಅಧ್ಯಕ್ಷ ಮತ್ತು ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜು, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಸಂಸದ ಜಿ.ಎಂ.ಸಿದ್ದೇಶ್ವರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಶಾಸಕ ಎಸ್.ವಿ.ರಾಮಚಂದ್ರ, ಶಾಸಕರಾದ ಸತೀಶ್ ಜಾರಕಿಹೊಳಿ, ಶಾಮನೂರು ಶಿವಶಂಕರಪ್ಪ, ಡಾ.ಯತೀಂದ್ರ, ಚಿಕ್ಕಮಾದು, ರಾಜವೆಂಕಟಪ್ಪ ನಾಯಕ, ಡಿ.ಕೆ. ಶಿವಕುಮಾರ್, ನರಸಿಂಹನಾಯಕ ಉಪಸ್ಥಿತರಿದ್ದರು.

10 ಕೋಟಿ ರೂ. ಬಿಡುಗಡೆ: ಬಿಎಸ್‌ವೈ

ವಾಲ್ಮೀಕಿ ಸಮುದಾಯದವರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮುಂದುವರಿಯಲು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ. ವಾಲ್ಮೀಕಿ ಗುರುಪೀಠ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರದಿಂದ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯುವಜನರ ಅಭಿವೃದ್ಧಿಗಾಗಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ವಾಲ್ಮೀಕಿ ಸಮುದಾಯದ ಆರ್ಥಿಕ ಸ್ವಾವಲಂಬನೆಗೆ ಬದ್ಧವಾಗಿರುವ ರಾಜ್ಯ ಸರಕಾರ, ವಾಲ್ಮೀಕಿ ಗುರುಪೀಠದ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ 10.8 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಈಗಾಗಲೇ 5.4 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ನಟ ಸುದೀಪ್‌ಗೆ ‘ವಾಲ್ಮೀಕಿ ರತ್ನ'

ಹರಿಹರ ತಾಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಚಲನಚಿತ್ರ ನಟ ಸುದೀಪ್ ಅವರಿಗೆ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು ‘ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News