ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

Update: 2021-02-09 17:35 GMT

ಬೆಂಗಳೂರು, ಫೆ.9: ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಬಳ್ಳಾರಿ ಮೂಲದ ಎರೀಸ್ವಾಮಿ ಎಂಬುವವರಿಂದ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಕರ್ನಾಟಕದ 31ನೆ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ರಾಜ್ಯ ಸರಕಾರ ಘೋಷಿಸಿತ್ತು. ಈ ಸಂಬಂಧ, ಫೆ.8ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿತ್ತು. ಬಳ್ಳಾರಿ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ ನೂತನ ವಿಜಯನಗರ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ನೂತನ ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನ ಹೊಸಪೇಟೆ ಆಗಿರಲಿದೆ.

ವಿಜಯನಗರ ಜಿಲ್ಲೆಯಲ್ಲಿ ಒಟ್ಟು 6 ತಾಲೂಕುಗಳು ಇರಲಿದೆ ಎಂದು ಸರಕಾರ ಅಧಿಸೂಚನೆಯಲ್ಲಿ ಘೋಷಿಸಿತ್ತು. ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲೂಕುಗಳು ನೂತನ ಜಿಲ್ಲೆಯ ಭಾಗವಾಗಿದೆ.

ಇಷ್ಟು ದಿನ ಈ ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿದ್ದವು. ಮುಂದಿನ ದಿನಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ ಮತ್ತು ಸಂಡೂರು ತಾಲೂಕುಗಳು ಮಾತ್ರ ಉಳಿಯುತ್ತವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News