ಸಿ.ಟಿ.ರವಿ, ಅನಂತಕುಮಾರ್ ಹೆಗಡೆ ವಿರುದ್ಧದ ದೂರಿನ ವಿಚಾರಣೆ ಮುಂದುವರಿಸಲು ಹೈಕೋರ್ಟ್ ಆದೇಶ

Update: 2021-02-10 15:41 GMT

ಬೆಂಗಳೂರು, ಫೆ.10:  ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಸಂಸದ ಅನಂತ ಕುಮಾರ್ ಹೆಗಡೆ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ಮುಂದುವರಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಉದ್ಯಮಿ ಆಲಂ ಪಾಷಾ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ.

2017ರಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸಂಸದ ಅನಂತಕುಮಾರ್ ಹೆಗಡೆ ಪತ್ರ ಬರೆದು, ಟಿಪ್ಪು ಜಯಂತಿ ಆಚರಣೆಗೆ ಆಕ್ಷೇಪ ವ್ಯಕ್ತಪಡಿಸಿ, ಟಿಪ್ಪುವಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಜತೆಗೆ ಇಂಥ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಬೇಡಿ ಎಂದು ಪತ್ರದಲ್ಲಿ ತಿಳಿಸಿದ್ದರು.

ಸಿ.ಟಿ.ರವಿ ಕೂಡ ಟಿಪ್ಪು ಜಯಂತಿ ಆಚರಿಸುವ ಮೂಲಕ ಸರಕಾರ ಹಿಂದೂಗಳನ್ನು ಅವಮಾನಿಸುತ್ತಿದೆ ಎಂದು ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಉದ್ಯಮಿ ಆಲಂ ಪಾಷಾ, ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಅನಂತಕುಮಾರ್ ಹೆಗಡೆ ಮತ್ತು ಸಿ.ಟಿ. ರವಿ ಅವರ ನಡೆ ಕೋಮು ಸೌಹಾರ್ದತೆಗೆ ಧಕ್ಕೆ ತಂದಿದೆ. ಹೀಗಾಗಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದರು.

ಪಿಸಿಆರ್ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್, ಅರ್ಜಿದಾರರು ದೂರು ದಾಖಲಿಸುವ ಮುನ್ನ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಹೀಗಾಗಿ, ದೂರು ವಿಚಾರಣೆಗೆ ಅರ್ಹವಲ್ಲ ಎಂದು ಅರ್ಜಿಯನ್ನು 2017ರ ನ.4ರಂದು ವಜಾ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಆಲಂ ಪಾಷಾ ಹೈಕೋರ್ಟ್ ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. 

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕುನ್ಹ ಅವರಿದ್ದ ಪೀಠ, ಐಪಿಸಿ ಸೆಕ್ಷನ್ 156(ಸಿ) ಪ್ರಕಾರ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ. ಹೀಗಾಗಿ, ಅರ್ಜಿದಾರರು ದಾಖಲಿಸಿರುವ ಖಾಸಗಿ ದೂರಿನ ವಿಚಾರಣೆ ಮುಂದುವರಿಸುವಂತೆ ಮ್ಯಾಜಿಸ್ಟ್ರೇಟ್ ಕೋರ್ಟ್‍ಗೆ ನಿರ್ದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News