ಯಡಿಯೂರಪ್ಪನವರೇ ಪೂರ್ಣಾವಧಿ ಮುಖ್ಯಮಂತ್ರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ವಿಜಯಪುರ, ಫೆ. 11: ‘ಬಿ.ಎಸ್.ಯಡಿಯೂರಪ್ಪನವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದು, ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ' ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಗುರುವಾರ ನಗರದ ಶ್ರೀ ಶಂಕರಲಿಂಗ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಸುಭದ್ರ ಸರಕಾರ ನೀಡಲಿದ್ದು, ಬಿಜೆಪಿಯಲ್ಲಿ ಬಿಎಸ್‍ವೈ ಅವರೇ ಶಾಶ್ವತ ಮುಖ್ಯಮಂತ್ರಿ. ಈ ಬಗ್ಗೆ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಶಾಸಕ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಮೀಸಲಾತಿ ಗೊಂದಲವಿಲ್ಲ: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2‘ಎ' ಮೀಸಲಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಬೇಡಿಕೆ ಇದ್ದು, ಈ ಕುರಿತು ಕಾನೂನು ಚೌಕಟ್ಟಿನಲ್ಲಿ ಸರಕಾರ ಪರಿಶೀಲನೆ ನಡೆಸಲಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.
ಮೀಸಲಾತಿ ಬೇಡಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಬೆದರಿಸುವ ತಂತ್ರ ಸರಿಯಲ್ಲ. ಯಡಿಯೂರಪ್ಪನವರು ಎಲ್ಲ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಲಿದ್ದಾರೆ. ಈ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ನಿಯಮ ಪಾಲಿಸಬೇಕು: ರಾಜ್ಯದಲ್ಲಿ ಜಾತ್ರೆ, ಉತ್ಸವಕ್ಕೆ ಅನುಮತಿ ಕೋರಿ ಸಾರ್ವಜನಿಕರಿಂದ ಮನವಿಗಳು ಬಂದಿದ್ದವು. ಹೀಗಾಗಿ ಉತ್ಸವ, ಪರಂಪರೆ, ಆಚರಣೆಗಳಿಗೆ ಕೋವಿಡ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಆದರೆ, ಜಾತ್ರೆ, ಉತ್ಸವಗಳಲ್ಲಿ ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು ಎಂದ ಅವರು, ಕೋವಿಡ್ ಸೋಂಕು ತಡೆಗೆ ಮುನ್ನಚ್ಚರಿಕೆ ಅಗತ್ಯ ಎಂದರು.