ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೆ ಮಧು ಬಂಗಾರಪ್ಪ ಸನ್ನದ್ಧ

Update: 2021-02-11 14:06 GMT

ಬೆಂಗಳೂರು, ಫೆ.11: ಮಾಜಿ ಶಾಸಕ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತರಾಗಿದ್ದ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಸನ್ನದ್ಧರಾಗಿದ್ದಾರೆ.

ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಮಧು ಬಂಗಾರಪ್ಪ, ಕಾಂಗ್ರೆಸ್ ಪಕ್ಷ ಸೇರ್ಪಡೆ ಸಂಬಂಧ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಶಿವಕುಮಾರ್ ಅವರ ಪುತ್ರಿ ವಿವಾಹ ನಿಮಿತ್ತ ಮಧು, ಡಿಕೆಶಿ ನಿವಾಸಕ್ಕೆ ತೆರಳಿದ್ದರು ಎಂದು ಗೊತ್ತಾಗಿದೆ.

ಈಗಾಗಲೇ ಜೆಡಿಎಸ್ ಪಕ್ಷದಿಂದ ಬಹುತೇಕ ಹೊರಗಿರುವ ಮಧು ಬಂಗಾರಪ್ಪ, ಕಾಂಗ್ರೆಸ್ ಸೇರ್ಪಡೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮತಿಸಿದರೆ ಶೀಘ್ರದಲ್ಲೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಮಧು ಬಂಗಾರಪ್ಪ ಅವರ ಸಹೋದರ ಕುಮಾರ್ ಬಂಗಾರಪ್ಪ ಈಗಾಗಲೇ ಬಿಜೆಪಿ ಸೇರ್ಪಡೆಯಾಗಿದ್ದು, ಶಿವಮೊಗ್ಗ ಜಿಲ್ಲೆ ಸೊರಬ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಧು ಆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News