ಎಲ್ಲ ರೀತಿಯ ಶಾಲಾ ತರಗತಿ ಆರಂಭಕ್ಕೆ ಫೆ.16ರಂದು ಸಭೆ: ಸಚಿವ ಸುರೇಶ್‍ ಕುಮಾರ್

Update: 2021-02-12 14:14 GMT

ಬೆಂಗಳೂರು, ಫೆ.12: ರಾಜ್ಯ ವ್ಯಾಪಿ ಎಲ್ಲ ರೀತಿಯ ಶಾಲಾ ತರಗತಿಗಳನ್ನು ಆರಂಭಿಸುವ ಸಂಬಂಧ ಫೆ.16ರಂದು ಸಭೆ ನಡೆಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ತಿಳಿಸಿದರು.

ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಇಲಾಖೆಯ ಹಲವಾರು ವಿಷಯಗಳ ಮತ್ತು ಈಗಾಗಲೇ ಆರಂಭವಾಗಿರುವ ತರಗತಿಗಳ ಹಾಜರಾತಿ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲ ಭಾಗಗಳಿಂದಲೂ ಪ್ರಸ್ತುತ ಶೈಕ್ಷಣಿಕ ವರ್ಷದ ಉಳಿದ ತರಗತಿಗಳನ್ನು ಆರಂಭಿಸಬೇಕೆಂಬ ಪೋಷಕರು, ವಿದ್ಯಾರ್ಥಿ ಸಮುದಾಯದ ಒತ್ತಾಯದ ಹಿನ್ನೆಲೆಯಲ್ಲಿ ಶಾಲಾರಂಭ ಕುರಿತಂತೆ ಫೆ.16ರಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಇತ್ತೀಚೆಗೆ ಭೇಟಿ ನೀಡಿದ 15ಕ್ಕೂ ಹೆಚ್ಚು ಜಿಲ್ಲೆಗಳ ಹಲವಾರು ಶಾಲೆಗಳಲ್ಲಿ ಕೋವಿಡ್ ನಿಯಮಗಳ ಪಾಲನೆ ಮಾಡುತ್ತಿರುವುದನ್ನು ತಾವು ಖುದ್ದಾಗಿ ಪರಿಶೀಲಿಸಿದ್ದು, ಶಾಲೆಗಳು ತಡವಾಗಿ ಆರಂಭವಾಗಿರುವುದರಿಂದ ಶಾಲೆಗಳಿಗೆ ಬಹು ಆಸ್ಥೆಯಿಂದ ಬರುತ್ತಿದ್ದಾರೆ. ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಪಾಠ ಪ್ರವಚನ ಆಲಿಸುತ್ತಿರುವುದು ಕಂಡುಬಂದಿದೆ ಎಂದು ತಿಳಿಸಿದರು.

ಕಡತ ವಿಲೇವಾರಿ ಯಜ್ಞ: ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಉಪನಿರ್ದೇಶಕರ ಕಚೇರಿಗಳಲ್ಲಿ ಕೆಲಸಗಳು ಸರಿಯಾಗಿ ಹಾಗೂ ಸಕಾಲದಲ್ಲಿ ಆಗುತ್ತಿಲ್ಲವೆಂದು ಪದೇ ಪದೇ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಕಡತ ವಿಲೇವಾರಿ ಯಜ್ಞಕ್ಕೆ ಚಾಲನೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮಾ.1ರಿಂದ ಧಾರವಾಡ ಅಪರ ಆಯುಕ್ತಾಲಯ ವಿಭಾಗ ವ್ಯಾಪ್ತಿಯಲ್ಲಿ ಕಡತ ವಿಲೇವಾರಿ ಆದಾಲತ್‍ಅನ್ನು ತಮ್ಮ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಅದೇ ಮಾದರಿಯಲ್ಲಿ ಉಳಿದ ಆಯುಕ್ತಾಲಯಗಳೂ ಕ್ರಮ ವಹಿಸಲು ಮುಂದಾಗಬೇಕೆಂದೂ ಸುರೇಶ್‍ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್, ಸಮಗ್ರ ಶಿಕ್ಷಣ-ಕರ್ನಾಟಕ ರಾಜ್ಯಯೋಜನಾ ನಿರ್ದೇಶಕಿ ದೀಪಾ ಚೋಳನ್ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News